ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಅಪಹರಣದ ಮತ್ತೊಂದು ಪ್ರಕರಣದ ಆರೋಪಿಯಾಗಿ ಸದ್ಯ ಎಸ್‌ಐಟಿ ಬಂಧನದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿರುವ ನಿಯಮಿತ (ರೆಗ್ಯುಲರ್) ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಈ ಕುರಿತಂತೆ ಎಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್–82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಮಂಗಳವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಅರ್ಜಿದಾರ ರೇವಣ್ಣ ಪರ ಹಾಜರಾಗಿದ್ದ ಹೈಕೋರ್ಟ್ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ಆರೋಪಿಗೆ ಜಾಮೀನು ನೀಡಲು ಸಾಧ್ಯವಿರುವ ಕಾನೂನಿನ ಅಂಶಗಳು ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಪೂರ್ವ ನಿದರ್ಶನಗಳನ್ನು ನ್ಯಾಯಾಧೀಶರಿಗೆ ವಿವರಿಸಿದರು.
ವಾದ ಆಲಿಸಿದ ನ್ಯಾಯಾಧೀಶರು, ‘ಆರೋಪಿ ಪೊಲೀಸ್ ಕಸ್ಟಡಿಯಲ್ಲಿ ಇರುವಾಗ ಆತ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬಹುದೇ ಹೇಗೆ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಿ’ ಎಂದು ಎಸ್ಐಟಿಗೆ ಆದೇಶಿಸಿದರು. ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಬುಧವಾರ (ಮೇ 8) ಬೆಳಿಗ್ಗೆ 11 ಗಂಟೆಗೆ ಮುಂದೂಡಿದರು. ಅರ್ಜಿದಾರ ರೇವಣ್ಣ ಪರ ಹೈಕೋರ್ಟ್ ವಕೀಲ ಪವನ್ ಸಾಗರ್ ವಕಾಲತ್ತು ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.