ಬೆಂಗಳೂರು: ‘ನನ್ನ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಆರೋಪದ ಖಾಸಗಿ ದೂರನ್ನು ರದ್ದುಪಡಿಸಬೇಕು‘ ಎಂದು ಕೋರಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತಂತೆ ಡಿ.ರೂಪಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮುಗದಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದ್ದು, ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
ಪ್ರಕರಣವೇನು?: ‘ನನ್ನ ವಿರುದ್ಧ ಡಿ.ರೂಪಾ ಮೌದ್ಗಿಲ್ 2023ರ ಫೆಬ್ರುವರಿ 18 ಮತ್ತು 19ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮಗಳಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಲಾಗಿದೆ. ಇದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಮಾನಸಿಕ ಯಾತನೆ ಉಂಟು ಮಾಡಿದೆ‘ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾರ್ಚ್ 3ರಂದು ವಿಚಾರಣಾ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
‘ಮಾನಹಾನಿ ಮತ್ತು ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ.ರೂಪಾ ಅವರಿಂದ ₹ 1 ಕೋಟಿ ಮೊತ್ತವನ್ನು ಪರಿಹಾರ ರೂಪವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು‘ ಎಂದು ಕೋರಿದ್ದರು. ಈ ದೂರನ್ನು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಮಾರ್ಚ್ 24ರಂದು ಆದೇಶಿಸಿತ್ತು.
ಈ ಆದೇಶ ಮತ್ತು ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಕೋರಿ ರೂಪಾ 2023ರ ಮೇ 31ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗಸ್ಟ್ 4ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.