ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳವು 2021–22ನೇ ಸಾಲಿನಲ್ಲಿ ₹24.74 ಕೋಟಿ ನಿವ್ವಳ ಲಾಭ ಗಳಿಸಿದೆ.
‘ಮಾರಾಟ ಮಹಾಮಂಡಳವುಒಟ್ಟು ₹1,679.21 ಕೋಟಿ ವಹಿವಾಟು ನಡೆಸಿ ಪ್ರಗತಿಯ ಹಾದಿಯಲ್ಲಿ ಸಾಗಿದೆ. ಮಂಡಳಿಯು ಪ್ರಸ್ತುತ ₹9.02 ಕೋಟಿ ಷೇರು ಬಂಡವಾಳ ಹೊಂದಿದೆ’ಎಂದು ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
‘ಮಹಾಮಂಡಳವು ವಿವಿಧ ಯೋಜನೆಗಳನ್ನು ರೂಪಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯದ 50 ಸ್ಥಳಗಳಲ್ಲಿ ಚಿಲ್ಲರೆ ರೂಪದಲ್ಲಿ ರಸಗೊಬ್ಬರ, ಕ್ರಿಮಿನಾಶಕ, ಕೃಷಿ ಉತ್ಪನ್ನಗಳ ಮಾರಾಟಕ್ಕಾಗಿ ಮಳಿಗೆಗಳನ್ನು ತೆರೆಯಲು ಉದ್ದೇಶಿಸಿದೆ’ ಎಂದು ವಿವರಿಸಿದರು.
‘ಮಹಾಮಂಡಳದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ನಿವೃತ್ತಿ ಪಿಂಚಣಿ ಸೌಲಭ್ಯ ಯೋಜನೆಯನ್ನು ಜಾರಿಗೊಳಿಸುವ ಚಿಂತನೆ ಇದೆ. ಜತೆಗೆ, ಜನರಿಕ್ ಔಷಧದ ಸಗಟು ಮತ್ತು ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು ಹಾಗೂ ಲಾಜಿಸ್ಟಿಕ್ ವೇರ್‌ಹೌಸ್ ಮತ್ತು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಲಾಗುವುದು ಮತ್ತು ರೈತರಿಗೆ ಅನುಕೂಲ ಕಲ್ಪಿಸಲು ಇ–ಮಾರುಕಟ್ಟೆ ಘಟಕಗಳನ್ನು ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.
‘ಶಿಕ್ಷಣ ಮತ್ತು ತರಬೇತಿ ಕಾರ್ಯಗಳನ್ನು ಕೈಗೊಳ್ಳಲು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ₹2ಕೋಟಿ ಶಿಕ್ಷಣ ನಿಧಿ ನೀಡಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.