ADVERTISEMENT

ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2024, 23:31 IST
Last Updated 11 ನವೆಂಬರ್ 2024, 23:31 IST
   

ಬೆಂಗಳೂರು: ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ಈ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದೆ. ಮನೆ ಮನೆಗೆ ತೆರಳಿ ಮತ ಯಾಚಿಸಲು ಮಂಗಳವಾರ ಅವಕಾಶವಿದ್ದು, ಬುಧವಾರ (ನ.13) ಮತದಾನ ನಡೆಯಲಿದೆ.

ಬಹಿರಂಗ ಪ್ರಚಾರದ ಕೊನೆಯ ದಿನ ಕೂಡಾ ಕಾಂಗ್ರೆಸ್ ಮತ್ತು ಜೆಡಿಎಸ್–ಬಿಜೆಪಿ ಮೈತ್ರಿಕೂಟದ ನಾಯಕರು, ಈ ಮೂರೂ ಕ್ಷೇತ್ರಗಳಲ್ಲಿ ಬೃಹತ್‌ ಸಮಾವೇಶ, ರ‍್ಯಾಲಿಗಳನ್ನು ಆಯೋಜಿಸುವ ಮೂಲಕ ಮತದಾರರ ಮನಸ್ಸು ಗೆಲ್ಲಲು ಕಸರತ್ತು ನಡೆಸಿದರು.

ಕೊನೆಯ ದಿನ ಈ ಕ್ಷೇತ್ರಗಳಲ್ಲಿ ರಾಜಕೀಯ ಜಾತ್ರೆಯ ವಾತಾವರಣವೇ ನಿರ್ಮಾಣವಾಗಿತ್ತು. ಕ್ಷೇತ್ರದ ತುಂಬಾ ಪಕ್ಷದ ಬಾವುಟಗಳು ರಾರಾಜಿಸಿದವು. 

ADVERTISEMENT

ಈ ಮೂರೂ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಬಿಜೆಪಿ- ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿಯಿದೆ. ಸಂಡೂರು (ಕಾಂಗ್ರೆಸ್‌), ಶಿಗ್ಗಾವಿ (ಬಿಜೆಪಿ), ಚನ್ನಪಟ್ಟಣ (ಜೆಡಿಎಸ್‌) ಕ್ಷೇತ್ರವನ್ನು ತಮ್ಮಲ್ಲೇ ಉಳಿಸಿಕೊಳ್ಳಲು ಮೂರೂ ಪಕ್ಷಗಳು ಅಬ್ಬರದ ಪ್ರಚಾರ ನಡೆಸಿವೆ.

ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರು, ಶಾಸಕರು ಭರ್ಜರಿ ಪ್ರಚಾರ ನಡೆಸಿದರು. ಶಿಗ್ಗಾವಿ ಮತ್ತು ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಲ್ಹಾದ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಸೇರಿದಂತೆ ಪ್ರಮುಖರು ಮತ ಯಾಚನೆ ನಡೆಸಿದರು. ಜೆಡಿಎಸ್ ನಾಯಕರು ಈ ಕ್ಷೇತ್ರದತ್ತ ಸುಳಿಯಲಿಲ್ಲ.

ಚನ್ನಪಟ್ಟಣದಲ್ಲಿ ಪ್ರಚಾರದ ಅಬ್ಬರ ಜೋರಾಗಿತ್ತು. ಡಿ.ಕೆ. ಶಿವಕುಮಾರ್‌ ಮತ್ತು ಎಚ್‌.ಡಿ. ಕುಮಾರಸ್ವಾಮಿ ನಡುವಿನ ಕದನ ಎಂಬಂತೆ ಈ ಕ್ಷೇತ್ರದ ಉಪ ಚುನಾವಣೆ ಬಿಂಬಿತಗೊಂಡಿದ್ದರಿಂದ ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿತ್ತು. ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಜತೆಗೆ ಬಿಜೆಪಿ ನಾಯಕರು ಪ್ರಚಾರದಲ್ಲಿ ಭಾಗಿಯಾದರು. ಶಿವಕುಮಾರ್‌ ಜತೆಗೆ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಿದರು.

ಮತ ಎಣಿಕೆ ಇದೇ 23ರಂದು ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.