ADVERTISEMENT

ವೈದ್ಯಕೀಯ ಕೋರ್ಸ್ ಅರ್ಹತಾ ಪರೀಕ್ಷೆ ನಡೆಸಲು ಅವಕಾಶ ನೀಡಲಿ: ಡಿ.ಕೆ. ಶಿವಕುಮಾರ್

ಸುಳ್ಳಿಗೆ ಮತ್ತೊಂದು ಹೆಸರೇ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 15:58 IST
Last Updated 15 ಜೂನ್ 2024, 15:58 IST
<div class="paragraphs"><p>ಡಿ.ಕೆ. ಶಿವಕುಮಾರ್</p></div>

ಡಿ.ಕೆ. ಶಿವಕುಮಾರ್

   

ಬೆಂಗಳೂರು: ‘ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅರ್ಹತಾ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿನ (ನೀಟ್) ಅಕ್ರಮ ಗಂಭೀರ ಅಪರಾಧ. ಹೀಗಾಗಿ, ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಲಿ ಎಂದು ಕೇಂದ್ರವನ್ನು ಮನವಿ ಮಾಡುತ್ತೇನೆ. ರಾಜ್ಯಗಳು ನಡೆಸುವ ಪರೀಕ್ಷೆಯಲ್ಲಿ ದೇಶದ ಎಲ್ಲ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಲಿ. ಅವರಿಗೆ ಮೀಸಲಾತಿಯನ್ನೂ ನೀಡಬಹುದು’ ಎಂದರು.

ADVERTISEMENT

‘ನೀಟ್ ಪರೀಕ್ಷೆಯಿಂದ ಉತ್ತರ ಭಾರತದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ನಮ್ಮ ಮಕ್ಕಳಿಗೆ ತಾರತಮ್ಯವಾಗುತ್ತಿದೆ. ಈ ವಿಚಾರದಲ್ಲಿ ಒಗ್ಗಟ್ಟಿನಿಂದ ಹೋರಾಡಬೇಕು. ನೀಟ್ ಅಕ್ರಮದ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರ ಜತೆ ಚರ್ಚಿಸಿದ್ದೇನೆ. ಈ ವಿಚಾರವಾಗಿ ಉನ್ನತ ಮಟ್ಟದ ತನಿಖೆಯಾಗಿ, ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರದ ಪ್ರಸ್ತಾವ ಸರಿಯಾಗಿಲ್ಲ’ ಎಂಬ ಬಸವರಾಜ ಬೊಮ್ಮಾಯಿ ಹೇಳಿಕೆ ಬಗ್ಗೆ ಕೇಳಿದಾಗ, ‘ಸುಳ್ಳಿಗೆ ಮತ್ತೊಂದು ಹೆಸರೇ ಬೊಮ್ಮಾಯಿ ಎನ್ನುವಂತಾಗುತ್ತಿದೆ’ ಎಂದರು.

‘ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೇ ಭದ್ರಾ ಮೇಲ್ದಂಡೆ ಯೋಜನೆಯನ್ನು ಬಜೆಟ್‌ನಲ್ಲಿ ಕೇಂದ್ರ ಸೇರಿಸಿಕೊಂಡಿತ್ತು. ನಮ್ಮ ಪ್ರಸ್ತಾವ ಸರಿಯಾಗಿಲ್ಲ ಎಂದಾದರೆ, ಹೇಗೆ ಬರೆಯಬೇಕೆಂದು ಅವರಿಂದಲೇ ಕೇಳಿ ಬರೆದು ಕೊಡುತ್ತೇವೆ. ಬೊಮ್ಮಾಯಿಯವರೂ ನೀರಾವರಿ ಸಚಿವರಾಗಿದ್ದವರು. ರಾಷ್ಟ್ರೀಯ ಯೋಜನೆ ಮಾಡಿ ಎಂದು ಪ್ರಸ್ತಾವ ಸಲ್ಲಿಸಲಾಗಿತ್ತು. ಸಂಪುಟ ಸಭೆಯ ಮುಂದೆ ಇಟ್ಟುಕೊಂಡರೇ ಹೊರತು, ಹಣ ಬಿಡುಗಡೆ ಮಾಡಲಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.