ADVERTISEMENT

ಬೆಂಗಳೂರು ದಕ್ಷಿಣಕ್ಕೆ ಎರಡನೇ ವಿಮಾನ ನಿಲ್ದಾಣ: ಮನವಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 23:02 IST
Last Updated 23 ಅಕ್ಟೋಬರ್ 2024, 23:02 IST
<div class="paragraphs"><p> ವಿಮಾನ ನಿಲ್ದಾಣ</p></div>

ವಿಮಾನ ನಿಲ್ದಾಣ

   

(ಸಂಗ್ರಹ ಚಿತ್ರ)

ಬೆಂಗಳೂರು: ಉದ್ದೇಶಿತ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರಿಗೆ ರಾಮನಗರ, ಮಂಡ್ಯ ಹಾಗೂ ಮೈಸೂರು ಭಾಗದ ಜನಪ್ರನಿಧಿಗಳು ಮನವಿ ಸಲ್ಲಿಸಿದ್ದಾರೆ.

ADVERTISEMENT

ಶಾಸಕರಾದ ಎಚ್.ಎ. ಇಕ್ಬಾಲ್ ಹುಸೇನ್, ಎಚ್.ಸಿ. ಬಾಲಕೃಷ್ಣ, ಪಿ.ಎಂ. ನರೇಂದ್ರಸ್ವಾಮಿ, ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಕೆ.ಎಂ. ಉದಯ್‌, ಪಿ. ರವಿಕುಮಾರ್, ಶಿವಣ್ಣ, ಎನ್. ಶ್ರೀನಿವಾಸ್, ವಿಧಾನ ಪರಿಷತ್‌ ಸದಸ್ಯರಾದ ಎಸ್. ರವಿ, ದಿನೇಶ್ ಗೂಳಿಗೌಡ, ಪುಟ್ಟಣ್ಣ ಮತ್ತು ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣೆ ಗೌಡ) ಅವರು ಈ ಬೇಡಿಕೆ ಇಟ್ಟಿದ್ದಾರೆ.

‘ಬೆಂಗಳೂರಿನ ಉತ್ತರ ಭಾಗದಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚರಿಸುವ ಪ್ರಯಾಣಿಕರ ಪೈಕಿ ಅರ್ಧದಷ್ಟು ಪ್ರಯಾಣಿಕರು ದಕ್ಷಿಣ ಭಾಗದವರೇ ಆಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ, ಬೊಮ್ಮನಹಳ್ಳಿ, ಬನ್ನೇರುಘಟ್ಟ ರಸ್ತೆ, ಜಯನಗರ, ಜೆ.ಪಿ. ನಗರ, ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ ರಸ್ತೆ ಸೇರಿದಂತೆ ಬೆಂಗಳೂರು ದಕ್ಷಿಣ ಭಾಗದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿರುವುದರಿಂದ  ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸಿದರೆ ಈ ಭಾಗದ ಜನತೆಗೆ ಅನುಕೂಲ ಆಗುವುದರ ಜತೆಗೆ ಇಲ್ಲಿ ವಾಣಿಜ್ಯ ಚಟುವಟಿಕೆಗಳೂ ಗರಿಗೆದರಲಿದೆ’ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

‘ಸದಾ ಸಂಚಾರ ದಟ್ಟಣೆಯ ತುಮಕೂರು ರಸ್ತೆಗಿಂತ ಮೈಸೂರು ರಸ್ತೆಯ ಸಂಚಾರ ದಟ್ಟಣೆ ತೀರ ವಿರಳ. ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಮೈಸೂರು ರಸ್ತೆಯ ಸಂಚಾರ ದಟ್ಟಣೆ ಇಳಿಮುಖವಾಗಿದೆ. ಈ ಎಲ್ಲ ಅಂಶಗಳನ್ನು ಆಧಾರವಾಗಿ ಇಟ್ಟುಕೊಂಡು ಉದ್ದೇಶಿತ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಅನುಮೋದನೆ ನೀಡಬೇಕು. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ನಾಗರಿಕ ವಿಮಾನಯಾನ ಸಚಿವಾಲಯಕ್ಕೂ ಈ ಬಗ್ಗೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು’ ಎಂದೂ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.