ಬೆಂಗಳೂರು: ‘ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ವಿಚಾರಣೆಗೆ ಹಾಜರಾಗಲು ಆಗುತ್ತಿಲ್ಲ. ನಾನು ನನ್ನ ವಕೀಲರ ಮೂಲಕ ವಿಚಾರಣೆಗೆ ಕಾಲಾವಕಾಶ ಕೋರಿ ಎಸ್‌ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ’ ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಜಿ. ಅವರು ಎಸ್‌ಐಟಿ ಅಧಿಕಾರಿಗಳಿಗೆ ಬುಧವಾರ ಪತ್ರ ಬರೆದಿದ್ದರು. ಅದನ್ನು ತಮ್ಮ ‘ಎಕ್ಸ್‘ ಖಾತೆಯಲ್ಲಿ ಪ್ರಜ್ವಲ್ ಹಂಚಿಕೊಂಡಿದ್ದಾರೆ.
ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ ಅವರ ಮಗ, ಸಂಸದ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಮಂಗಳವಾರ ನೋಟಿಸ್ ನೀಡಿದ್ದರು. ಆರೋಪಿಗಳ ಮನೆಗಳಿಗೂ ನೋಟಿಸ್ ಪ್ರತಿ ಅಂಟಿಸಿದ್ದರು.
‘ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಅವರಿಗೆ ನೀಡಿರುವ ನೋಟಿಸ್ ಬಗ್ಗೆ, ಅವರ ಕುಟುಂಬದವರಿಂದ ಮಾಹಿತಿ ಗೊತ್ತಾಗಿದೆ. ನನ್ನ ಕಕ್ಷಿದಾರ ಪ್ರಜ್ವಲ್, ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದಾರೆ. ನೋಟಿಸ್ ಬಗ್ಗೆ ಅವರಿಗೆ ತಿಳಿಸಲಾಗಿದೆ. ಅವರು ಬೆಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ, ತಾವು 7 ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕು’ ಎಂದು ಪತ್ರದಲ್ಲಿ ವಕೀಲ ಅರುಣ್ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.