ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರದ ಗುಡ್ಡದಲ್ಲಿ ಮಂಗಳವಾರ ರಾತ್ರಿ ಸುಮಾರು 7.30ರ ವೇಳೆ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಐದು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ವಿಷಯ ಬುಧವಾರ ಗೊತ್ತಾಗಿದೆ.
ಆಕೆಯೊಂದಿಗೆ ಇದ್ದ ಸ್ನೇಹಿತನ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ. ಹೀಗಾಗಿ ಇಬ್ಬರೂ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಲನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಹೊರರಾಜ್ಯದಿಂದ ಬಂದ ಕಾರ್ಮಿಕರೆಂದು ಪೊಲೀಸರು ಶಂಕಿಸಿದ್ದು, ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ.
ಯುವತಿ ಮಹಾರಾಷ್ಟ್ರದವರಾಗಿದ್ದಾರೆ. ಯುವಕ ಕರ್ನಾಟಕದವರೇ, ಆದರೆ ಸ್ಥಳೀಯರಲ್ಲ. ಅತ್ಯಾಚಾರ ದೂರು ದಾಖಲಿಸಲು ಪೊಲೀಸರು ವಿಳಂಬ ಮಾಡಿದರು ಎಂಬ ಆರೋಪವೂ ಕೇಳಿ ಬಂದಿದೆ.
‘ಘಟನೆಯಿಂದ ಆಘಾತಕ್ಕೆ ಒಳಗಾಗಿರುವ ಯುವತಿ ಅತ್ಯಾಚಾರ ಕುರಿತು ಹೇಳಿಕೆ ನೀಡಿಲ್ಲ. ಆಕೆಯ ಸ್ನೇಹಿತನ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ತಿಳಿಸಿದರು.
‘ನಗರದ ಕಾಲೇಜ್‌ವೊಂದರಲ್ಲಿ ಎಂಬಿಎ ಓದುತ್ತಿರುವ ಇಬ್ಬರೂ ಬೈಕ್‌ನಲ್ಲಿ ತೆರಳಿ ಲಲಿತಾದ್ರಿಪುರದ ಗುಡ್ಡದಲ್ಲಿ ಕುಳಿತಿದ್ದಾಗ ಘಟನೆ ನಡೆದಿದೆ. ಅವರನ್ನು ಹೊರವರ್ತುಲ ರಸ್ತೆಯಿಂದಲೇ ದುಷ್ಕರ್ಮಿಗಳು ಹಿಂಬಾಲಿಸಿದ್ದರು. ಯುವಕನನ್ನು ಥಳಿಸಿ, ಆತನ ಎದುರಲ್ಲೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದರು. ನಂತರ ಚೇತರಿಸಿಕೊಂಡ ಯುವಕ ತನ್ನ ಸ್ನೇಹಿತರೊಬ್ಬರಿಗೆ ಮಾಹಿತಿ ನೀಡಿದ್ದರು. ಅವರು ಬಂದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದರು’ ಎಂದು ಮೂಲಗಳು ತಿಳಿಸಿವೆ.
ಘಟನೆ ನಡೆದ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರು ಭೇಟಿ ನೀಡಿ ಪರಿಶೀಲಿಸಿದರು.
‘ಪ್ರಕರಣದ ಮಾಹಿತಿ ದೊರೆತ ಕೂಡಲೇ ಪೊಲೀಸರು ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸದೆ ವಿಳಂಬ ಮಾಡಿರುವುದು ಅನುಮಾನ ಮೂಡಿಸಿದೆ’ ಎಂದು ಕೆಪಿಸಿಸಿ ವಕ್ತಾರೆ ಮಂಜುಳಾ ಮಾನಸ ಆರೋಪಿಸಿದ್ದಾರೆ.
ಸಭೆ: ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಎಸ್.ಟಿ.ಸೋಮಶೇಖರ್, ‘ನಗರ
ದಲ್ಲಿ ಕೆಲವು ದಿನಗಳಿಂದ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ‘ಅತ್ಯಾಚಾರಿಗಳನ್ನು ಕೂಡಲೇ ಬಂಧಿಸಬೇಕು’ ಎಂದು ಸೂಚಿಸಿದರು.
ಪ್ರತಿಭಟನೆ: ಘಟನೆಯನ್ನು ಖಂಡಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ನಗರದ ಜಿಲ್ಲಾ ನ್ಯಾಯಾಲಯದ ಮುಂದೆ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು. ಘಟನೆ ಹಿನ್ನೆಲೆಯಲ್ಲೇ ಗೃಹ ಸಚಿವ ಅರಗ ಜ್ಞಾನೇಂದ್ರ ನಗರಕ್ಕೆ ಗುರುವಾರ ಸಂಜೆ ಭೇಟಿ ನೀಡಲಿದ್ದಾರೆ.
ತನಿಖೆಗೆ ವಿಶೇಷ ತಂಡ: ಆರಗ ಜ್ಞಾನೇಂದ್ರ
ಬೆಂಗಳೂರು: ‘ಮೈಸೂರು ನಗರದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣದ ತನಿಖೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಪ್ರಕರಣ ಕುರಿತು ಮೈಸೂರು ನಗರ ಪೊಲೀಸ್ ಕಮಿಷನರ್ ಅವರಿಂದ ಮಾಹಿತಿ ಪಡೆದ ಬಳಿಕ ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ತಕ್ಷಣ ಮೈಸೂರಿಗೆ ತೆರಳಿ ತನಿಖೆಗೆ ಮಾರ್ಗದರ್ಶನ ನೀಡುವಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ್ ರೆಡ್ಡಿ ಅವರಿಗೆ ಸೂಚನೆ ನೀಡಲಾಗಿದೆ. ಗುರುವಾರ ಮೈಸೂರಿಗೆ ಭೇಟಿ ನೀಡ
ಲಿದ್ದು, ಅಧಿಕಾರಿಗಳ ಸಭೆ ನಡೆಸಿ ಪರಿಶೀಲನೆ ನಡೆಸುತ್ತೇನೆ’ ಎಂದು ಹೇಳಿದರು.
‘ಸಂತ್ರಸ್ತೆಯನ್ನು ಮಂಗಳವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೈಸೂರು ಪ್ರವಾಸಿ ತಾಣ. ಅಲ್ಲಿ ಪದೇ ಪದೇ ಇಂತಹ ಘಟನೆ ಗಳು ನಡೆಯುವುದರಿಂದ ನಗರದ ಘನತೆಗೆ ಧಕ್ಕೆಯಾಗಲಿದೆ. ಈ ಮೊದಲು ಶೂಟೌಟ್ ನಡೆದಿತ್ತು. ಈಗ ಸಾಮೂಹಿಕ ಅತ್ಯಾಚಾರ ನಡೆದಿದೆ. ಇದೊಂದು ದುರಂತ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.