ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇದೇ 29ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಹಗರಣದ ನಾಲ್ಕನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜೈಲಿನಲ್ಲಿರುವ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಅಲ್ಲಿಂದಲೇ ವಿಡಿಯೊ ಕಾನ್ಫರೆನ್ಸ್ ಮುಖಾಂತರ ಹಾಜರು ಪಡಿಸಲಾಯಿತು.
ವಿಚಾರಣೆ ವೇಳೆ ರಾಜ್ಯ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ‘ಆರೋಪಿಯ ಧ್ವನಿ ಪರೀಕ್ಷೆ ನಡೆಸಬೇಕಿದೆ. ಮಹಜರು ಮಾಡಬೇಕಿದೆ ಹಾಗೂ ವಿಚಾರಣೆಯಲ್ಲಿ ಹಲವು ಸಾಕ್ಷಿಗಳನ್ನು ಆರೋಪಿಗೆ ಮುಖಾಮುಖಿಯಾಗಿಸಿ ಹೇಳಿಕೆ ದಾಖಲು ಮಾಡಿಕೊಳ್ಳಬೇಕಾಗಿದೆ. ಹೀಗಾಗಿ, ಏಳು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಬೇಕು’ ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಾಧೀಶರು ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು. ಪ್ರಜ್ವಲ್ ಪರ ವಕೀಲ ಜಿ.ಅರುಣ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.