ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಮುಖ್ಯಕಾರ್ಯದರ್ಶಿ ಹುದ್ದೆಯಿಂದ ನಿವೃತ್ತರಾದ ರಜನೀಶ್ ಗೋಯೆಲ್ ಅವರು ಶಾಲಿನಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಇವರಿಬ್ಬರೂ ಪತಿ–ಪತ್ನಿ. ಶಾಲಿನಿ ಅವರು ಮುಂದಿನ ಎರಡೂವರೆ ವರ್ಷ ಅಧಿಕಾರದಲ್ಲಿ ಇರಲಿದ್ದಾರೆ.
ಅಲ್ಲದೇ, ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಉಮಾ ಮಹಾದೇವನ್ ಅವರನ್ನು ಅಭಿವೃದ್ಧಿ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಪ್ರಮುಖ ಎರಡೂ ಉನ್ನತ ಹುದ್ದೆಗಳಲ್ಲೂ ಮಹಿಳೆಯರೇ ಇರುವುದೂ ವಿಶೇಷ. ಅಲ್ಲದೇ, ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ (ಹೆಚ್ಚುವರಿ ಪ್ರಭಾರ) ಜವಾಬ್ದಾರಿಯನ್ನು ಉಮಾ ಅವರಿಗೆ ನೀಡಲಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರಿಗೆ, ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರ ನೀಡಿ ವರ್ಗಾವಣೆ ಮಾಡಲಾಗಿದೆ.
ತೋಟಗಾರಿಕಾ ಇಲಾಖೆ ನಿರ್ದೇಶಕ ಡಿ.ಎಸ್. ರಮೇಶ್‌ಗೆ ಮೈಸೂರು ಪ್ರಾದೇಶಿಕ ಆಯುಕ್ತರ ಹೆಚ್ಚುವರಿ ಪ್ರಭಾರ ನೀಡಲಾಗಿದೆ. ಪಂಚಾಯತ್ ರಾಜ್ ಆಯುಕ್ತೆ ಅರುಂಧತಿ ಚಂದ್ರಶೇಖರ್ ಅವರಿಗೆ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕಿಯ (ಹೆಚ್ಚುವರಿ ಪ್ರಭಾರ) ಹೊಣೆ ನೀಡಿ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.