ಶಿರೂರು (ಅಂಕೋಲಾ): ಇಲ್ಲಿ ಗುಡ್ಡ ಕುಸಿತ ಸಂಭವಿಸಿದ ಸ್ಥಳದಲ್ಲಿ ಮಣ್ಣು ತೆರವು ಮತ್ತು ಕಣ್ಮರೆಯಾದವರ ಪತ್ತೆಗೆ ಉನ್ನತ ತಂತ್ರಜ್ಞಾನ ಮತ್ತು ಹೆಚ್ಚುವರಿ ಯಂತ್ರಗಳ ಬಳಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಗುಡ್ಡ ಕುಸಿದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ಅವರು ಮಣ್ಣು ತೆರವು, ಕಣ್ಮರೆಯಾದವರ ಪತ್ತೆ ಕಾರ್ಯಾಚರಣೆ ವೀಕ್ಷಿಸಿದರು.
ನಿರಂತರ ಮಳೆಯ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ತಂಡಗಳ ಜತೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರೆಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ಮುಖ್ಯಮಂತ್ರಿಗೆ ವಿವರಿಸಿದರು.
ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆಯೂ ಮುಖ್ಯಮಂತ್ರಿ ಅಧಿಕಾರಿಗಳಿಂದ ಮಾಹಿತಿ ಪಡೆದು ಜಾಗರೂಕರಾಗಿರುವಂತೆ ಎಚ್ಚರಿಸಿದರು.
ನದಿಯಲ್ಲಿ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದರು.
ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಸತೀಶ್ ಸೈಲ್, ಭೀಮಣ್ಣ ನಾಯ್ಕ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಶಾಲಿನಿ ರಜನೀಶ್, ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.