ಬೆಂಗಳೂರು: ‘ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದ ಪರಿಹಾರ ಕಾರ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೇಳಿಕೆಗಳನ್ನು ದಾಖಲಿಸಿಕೊಂಡ ಹೈಕೋರ್ಟ್ ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಲೇವಾರಿ ಮಾಡಿದೆ.
ಈ ಸಂಬಂಧ ಹೈಕೋರ್ಟ್ ವಕೀಲ ಶಿಜಿ ಮಲಯಾಳಿ ಹಾಗೂ ನವದೆಹಲಿಯ ಕೆ.ಆರ್.ಸುಭಾಷ್ ಚಂದ್ರನ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಹಾಜರಾಗಿದ್ದ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಚ್.ಶಾಂತಿಭೂಷಣ್, ‘ಲಾರಿ ಮತ್ತು ಅದರ ಚಾಲಕ ಅರ್ಜುನ್ ಮೃತದೇಹ ಪತ್ತೆಯಾಗಿರುವುದರಿಂದ ಅರ್ಜಿಯ ಉದ್ದೇಶ ಈಡೇರಿದಂತಾಗಿದೆ. ಒಟ್ಟು 11 ಮಂದಿಯ ಪೈಕಿ ಒಟ್ಟಾರೆ 9 ಮಂದಿಯ ಮೃತದೇಹ ಪತ್ತೆಯಾದಂತಾಗಿದೆ. ಈ ಸಂಬಂಧ ಸೂಕ್ತವಾದ ಪ್ರಮಾಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ’ ಎಂದರು.
ಇದಕ್ಕೆ ರಾಜ್ಯ ಸರ್ಕಾರದ ಪರ ವಕೀಲರು, ‘ದುರಂತದಲ್ಲಿ 11 ಮಂದಿಯ ಪೈಕಿ ಒಟ್ಟಾರೆ 9 ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ಪರಿಹಾರ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಇನ್ನಿಬ್ಬರ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ₹5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದ್ದು, ಅದನ್ನು ಬಿಡುಗಡೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ’ ಎಂದರು.
ಇದಕ್ಕೆ ಅರ್ಜಿದಾರರ ಪರ ವಕೀಲರು, ‘ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ನ್ಯಾಯಾಲಯವು ಸೂಕ್ತ ಆದೇಶ ಮಾಡಬಹುದು’ ಎಂದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಪತ್ತೆಯಾಗದ ಇಬ್ಬರು ಸಂತ್ರಸ್ತರ ಕುಟುಂಬದವರಿಗೆ ಎರಡು ತಿಂಗಳ ಒಳಗೆ ತಲಾ ₹5 ಲಕ್ಷ ಪರಿಹಾರ ಬಿಡುಗಡೆ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.