ADVERTISEMENT

ನಳಿನ್‌ ಕಾರು ಚಾಲಕನಾಗಿದ್ದ ಪ್ರವೀಣ್‌ ನಂತರ ದೂರವಾಗಿದ್ದು ಯಾಕೆ? ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜುಲೈ 2022, 9:42 IST
Last Updated 29 ಜುಲೈ 2022, 9:42 IST
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌    

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರು, ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ (ಕಟೀಲ್‌) ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಸುಳ್ಯ ಸಮೀಪದ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಸಂಭವಿಸಿತ್ತು. ಘಟನೆ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ‘ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ. ಈ ಬೆಳವಣಿಗೆಗಳನ್ನು ಕೂಡಾ ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖೆ ನಡೆಸಿದರೆ ಸತ್ಯ ಬಯಲಾದೀತು’ ಎಂದು ಹೇಳಿದ್ದಾರೆ.

ADVERTISEMENT

‘ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಚಿವ ಸುನೀಲ್‌ ಕುಮಾರ್‌, ವಿ.ಎಚ್.ಪಿ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ. ಕಟೀಲ್‌ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರು ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು’ ಎಂದು ಅವರು ತಿಳಿಸಿದ್ದಾರೆ.

‘ಹಿಂದುಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದುಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿಬಿಟ್ಟಿದೆ. ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ ಸಾವಿನ ಹಿಂದಿನ ಅಸಲಿ ಸತ್ಯ ಹೊರಗೆ ಬರದೆ ಮುಚ್ಚಿಹೋಗುತ್ತಿದೆ. ಹತ್ಯೆ ನಡೆಸಿರುವ ದುಷ್ಕರ್ಮಿಗಳು ಯಾವುದೇ ಪಕ್ಷ, ಜಾತಿ, ಧರ್ಮ ಇಲ್ಲವೇ ಸಂಘಟನೆಗಳಿಗೆ ಸೇರಿದ್ದರೂ ಮುಲಾಜಿಲ್ಲದೆ ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಯಾವುದಾದರೂ ಸಂಘಟನೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಅವುಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಬಿಜೆಪಿ ಸರ್ಕಾರ ತೋರಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಕಟೀಲ್‌ ಅವರು ಬಹಿರಂಗವಾಗಿ ಮುಸ್ಲಿಮರ ಬಗ್ಗೆ ಬೆಂಕಿ ಕಾರಿದರೂ, ಮುಸ್ಲಿಂ ಉದ್ಯಮಿಗಳ ಜೊತೆ ಅವರಿಗೆ ಹಾರ್ದಿಕ ಸಂಬಂಧ ಇರುವುದನ್ನು ಅವರೇ ಹಲವಾರು ಬಾರಿ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧಗಳು ಕೇವಲ ಸಾಮಾಜಿಕವಾದುದ್ದೇ? ಇಲ್ಲವೇ ವ್ಯಾಪಾರ ವಹಿವಾಟಿನದ್ದೇ?’ ಎಂದು ಪ್ರಶ್ನೆ ಮಾಡಿದ್ದಾರೆ.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾಕೆ ಹಿಂದುಳಿದ ಜಾತಿಗಳ ಅದರಲ್ಲೂ ಮುಖ್ಯವಾಗಿ ಬಿಲ್ಲವ ಯುವಕರೇ ಕೋಮುಘರ್ಷಣೆಯಲ್ಲಿ ಬಲಿಯಾಗುತ್ತಿದ್ದಾರೆ? ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ?’ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

‘ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರೂವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ, ಮಸೂದ್ ಮನೆಗೆ ಹೋಗದಿರಲು ಕಾರಣ ಏನೆಂಬುದನ್ನು ಸ್ಪಷ್ಟಪಡಿಸಬೇಕು. ಮೃತ ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಎಷ್ಟೇ ಮೊತ್ತದ ಪರಿಹಾರ ನೀಡಿದರೂ ಅದು ಅವರ ಸಂಘಟನೆಗೆ ಸಂಬಂಧಿಸಿದ್ದು. ಆದರೆ ವಿಚಾರಣಾ ಹಂತದಲ್ಲಿರುವ ಹತ್ಯೆ ಪ್ರಕರಣಗಳಲ್ಲಿ ಕುಟುಂಬಗಳಿಗೆ ಪರಿಹಾರ ನೀಡುವಾಗ ಭೇದಭಾವ ಆಗದಂತೆ ಎಚ್ಚರಿಕೆ ವಹಿಸುವುದು ಮುಖ್ಯಮಂತ್ರಿ ಕರ್ತವ್ಯವಾಗಿದೆ’ ಎಂದು ವಿರೋಧ ಪಕ್ಷದ ನಾಯಕ ಕಿವಿಮಾತು ಹೇಳಿದ್ದಾರೆ.

‘ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಕ್ಷ ಇಲ್ಲವೇ ಸರ್ಕಾರದ ಮೇಲೆ ಯಾವುದೇ ನಿಯಂತ್ರಣ ಇಲ್ಲ. ಅಸಹಾಯಕರಾಗಿರುವ ಬೊಮ್ಮಾಯಿಯವರು ಕುರ್ಚಿ ಉಳಿಸಿಕೊಳ್ಳಲಿಕ್ಕಾಗಿ ಆರ್‌ಎಸ್‌ಎಸ್‌ ಹೇಳಿದಂತೆ ಬೊಂಬೆ ರೀತಿ ಕುಣಿಯುತ್ತಿದ್ದಾರೆ. ಅವರ ಕುರ್ಚಿಯ ಉಳಿವು, ರಾಜ್ಯದ ಅಳಿವಾಗಿದೆ’ ಎಂದು ಅವರು ಹೇಳಿದ್ದಾರೆ.

ಇವುಗಳನ್ನೂ ಓದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.