ಹಿರಿಯೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಅವಮಾನಿಸಿದ ಕೃತ್ಯದ ಹೊಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ಸಿದ್ದರಾಮಯ್ಯ ಮಾತ್ರವಲ್ಲ ಇಡೀ ರಾಜ್ಯವನ್ನು ಅವಮಾನಿಸಿದ ಘಟನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಚಾರ ಹಂಚಿಕೊಳ್ಳುವ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಇಂತಹ ಕೃತ್ಯಗಳನ್ನು ಸಹಿಸುವುದಿಲ್ಲ. ಈ ಬಗ್ಗೆ ಸರ್ಕಾರ ಕಾನೂನು ಕ್ರಮ ಜರುಗಿಸಬೇಕು’ ಎಂದರು.
ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಪ್ಪುಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ವೃತ್ತದ ಮತ್ತೊಂದು ಪಾರ್ಶ್ವದಲ್ಲಿ ಪ್ರತಿಭಟನೆ ಕುಳಿತರು. ಸುಮಾರು ಅರ್ಧಗಂಟೆಗಳ ಕಾಲ ಉಭಯ ಕಾರ್ಯಕರ್ತರು ಒಂದೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.