ADVERTISEMENT

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ವಜಾಗೊಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2022, 14:10 IST
Last Updated 14 ಏಪ್ರಿಲ್ 2022, 14:10 IST
ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.    

ಬೆಂಗಳೂರು: ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಕಹತ್ಯೆಗೆ ನೇರ ಕಾರಣವೆಂಬ ಆರೋಪ ಎದುರಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟನಾ ರ‍್ಯಾಲಿ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ರೇಸ್‌ ಕೋರ್ಸ್‌ ರಸ್ತೆಯಲ್ಲಿ ಪೊಲೀಸರು ತಡೆದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ‌ ಕಾಂಗ್ರೆಸ್‌ ನಾಯಕರು ರ‍್ಯಾಲಿ ನಡೆಸಿ, ಮುಖ್ಯಮಂತ್ರಿಗೆ ನಿವಾಸದ ಕಡೆಗೆ ಕಾಲ್ನಡಿಗೆಯಲ್ಲಿ ಹೊರಟರು. ಭಾರಿ ಸಂಖ್ಯೆಯಲ್ಲಿದ್ದ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ರೇಸ್‌ ಕೋರ್ಸ್‌ ರಸ್ತೆ ದಾಟಿ ಹೋಗದಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ತಡೆದು ಪೊಲೀಸರು ವಶಕ್ಕೆ ಪಡೆದರು.

ರ‍್ಯಾಲಿಯ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ರಾಜ್ಯ ಬಿಜೆಪಿ ಮತ್ತು ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿದರು. ಭ್ರಷ್ಟ ಸರ್ಕಾರ, ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ವಾಗ್ವಾದ, ನೂಕಾಟ. ತಳ್ಳಾಟ ನಡೆಯಿತು.

ADVERTISEMENT

ಕಾಂಗ್ರೆಸ್ ನಾಯಕರು ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ನಾಯಕರು ಯೋಜನೆ ಹಾಕಿಕೊಂಡಿದ್ದರಿಂದ ಕುಮಾರಕೃಪಾ ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪೊಲೀಸರು ಸಂಚಾರ ನಿರ್ಬಂಧಿಸಿದರು. ರೇಸ್ ಕೋರ್ಸ್ ರಸ್ತೆಯಯಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದೆ.

ಅದಕ್ಕೂ ಮೊದಲು ಮಾತನಾಡಿದ ಡಿ.ಕೆ. ಶಿವಕುಮಾರ್ ಮಾತನಾಡಿ, ‘ಮೊದಲು ಈಶ್ವರಪ್ಪ ಮೇಲೆ ಭ್ರಷ್ಟಾಚಾರ ಪ್ರಕರಣ ದಾಖಲಿಸಿ ಈಶ್ವರಪ್ಪ ಅವರನ್ನು ಬಂಧಿಸಬೇಕು. ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು‘ ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಮಾತನಾಡಿ, ‘ದೇಶದಾದ್ಯಂತ ಇಂದು ಅಂಬೇಡ್ಕರ್ ಜನ್ಮದಿನ ಆಚರಿಸಲಾಗುತ್ತಿದೆ. ಅಂಬೇಡ್ಕರ್ ನಮ್ಮ ದೇಶಕ್ಕೆ ಶ್ರೇಷ್ಠ ಸಂವಿಧಾನ ಕೊಟ್ಟಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆಗಳು ಸಂವಿಧಾನಕ್ಕೆ ಅನುಗುಣವಾಗಿ ಆಡಳಿತ ನಡೆಸಬೇಕು‘ ಎಂದರು.

‘ಪಕ್ಷದ ವತಿಯಿಂದ ಅಂಬೇಡ್ಕರ್‌ಗೆ ಗೌರವ ಸಲ್ಲಿಸಿದ್ದೇವೆ. ಇವತ್ತು ಮೂರು ಗಂಟೆಗೆ ಕೆಪಿಸಿಸಿ ವತಿಯಿಂದ ಮಹದೇವಪುರದಲ್ಲಿ ಅಂಬೇಡ್ಕರ್ ಜನ್ಮದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.