ADVERTISEMENT

ಅಲೆಮಾರಿ ಆಯೋಗ ರಚನೆಗೆ ಬದ್ಧ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 28 ಜುಲೈ 2023, 16:54 IST
Last Updated 28 ಜುಲೈ 2023, 16:54 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಅಲೆಮಾರಿ ಸಮುದಾಯದ ಅಭಿವೃದ್ಧಿಗಾಗಿ ಆಯೋಗ ರಚನೆ ಮಾಡುವ ಸಂಬಂಧ ಕಾನೂನು ಸಲಹೆ ಪಡೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿ ಮುಖಂಡರೊಂದಿಗೆ ಶುಕ್ರವಾರ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಆಯೋಗ ರಚನೆಯ ಕುರಿತು ಸರ್ಕಾರ ಸಕಾರಾತ್ಮಕವಾಗಿದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಅಲೆಮಾರಿ ಜನಾಂಗಗಳು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು ಎಂದು ಹೇಳಿದರು.

ADVERTISEMENT

ಅಲೆಮಾರಿಗಳ ಸಮಸ್ಯೆಗಳು ವಿಶಿಷ್ಟವಾಗಿದ್ದು, ಒಟ್ಟು 120 ಜಾತಿಗಳಿವೆ. ಈ ಪೈಕಿ ಎಸ್‌ಸಿ 51, ಎಸ್‌ಟಿ 23 ಹಾಗೂ ಹಿಂದುಳಿದ ವರ್ಗದ 46 ಜಾತಿಗಳಿವೆ. ವಿವಿಧ ರಾಜ್ಯ ಮಟ್ಟದ ಸಂಘಟನೆಗಳಿವೆ. ಅವುಗಳನ್ನು ಒಟ್ಟು ಸೇರಿಸಿ ಸಮನ್ವಯ ಸಮಿತಿ ರಚಿಸಲಾಗಿದೆ. ಅತ್ಯಂತ ಹೀನಾಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ, ಅಸ್ಮಿತೆ ಇಲ್ಲದ ಸಮುದಾಯಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯುತ್ತಿಲ್ಲ. ಸರ್ಕಾರ ಅಲೆಮಾರಿಗಳನ್ನು ಗುರುತಿಸಬೇಕಿದೆ. ದಾಖಲೆಗಳಲ್ಲಿ ಇವರು ಇಲ್ಲದಿರುವುದರಿಂದ ಸಮಾಜದ ತಿರಸ್ಕಾರಕ್ಕೆ ಒಳಗಾಗಿದ್ದಾರೆ ಎಂದು ಸಮಿತಿಯ ಮುಖಂಡರು ತಿಳಿಸಿದರು.

ಸಭೆಯಲ್ಲಿ ಸಚಿವ ಬೈರತಿ ಸುರೇಶ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್‌, ವಿಧಾನಪರಿಷತ್‌ ಸದಸ್ಯ ಅನಿಲ್‌ ಕುಮಾರ್‌, ಲೇಖಕ ಎಸ್‌.ಜಿ.ಸಿದ್ದರಾಮಯ್ಯ, ಪತ್ರಕರ್ತ ಇಂದೂಧರ ಹೊನ್ನಾಪುರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.