ಬೆಂಗಳೂರು: ‘ಖಾಸಗಿ ಶಾಲೆಗಳ ನೋಂದಣಿ ನವೀಕರಣವೂ ಸೇರಿದಂತೆ ಈ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದ ಅನುಮತಿಗಳನ್ನು ನೀಡುವಾಗ ನಿಯಮಾವಳಿಗಳನ್ನು ಸರಳೀಕರಣಗೊಳಿಸುವ ಚಿಂತನೆ ಇದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದರು.
ವಿಧಾನಮಂಡಲದ ಅಧಿವೇಶನದಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಪ್ರಮುಖವಾಗಿ ಚರ್ಚಿಸಬೇಕಾದ ವಿಷಯಗಳ ಕುರಿತು ವಿಧಾನಪರಿಷತ್ ಸದಸ್ಯರೊಂದಿಗೆ ಬುಧವಾರ ಸಭೆ ನಡೆಸಿದ ಅವರು, ‘ ಕೊರೊನಾ ಸೃಷ್ಟಿಸಿರುವ ಸಂಕಷ್ಟದ ಸಂದರ್ಭದಲ್ಲಿ ಖಾಸಗಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಅರಿವು ಇದೆ’ ಎಂದರು.
‘ಆರ್ಥಿಕ ಮಿತವ್ಯಯದ ಕಾರಣದಿಂದ ಅನುದಾನಿತ ಶಾಲಾ ಕಾಲೇಜುಗಳಲ್ಲಿ ನಿವೃತ್ತಿ, ನಿಧನ ಕಾರಣ ಖಾಲಿಯಾದ ಹುದ್ದೆಗಳನ್ನು ತುಂಬಲು ಆರ್ಥಿಕ ಇಲಾಖೆ ನಿರ್ಬಂಧ ಹೇರಿದೆ. ಇಷ್ಟರಲ್ಲಿಯೇ ಈ ಮಿತವ್ಯಯವನ್ನು ಸಡಿಲಿಸಲು ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ಬಡ್ತಿ ವಿಚಾರವಾಗಿಯೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದೂ ಅವರು ಭರವಸೆ ನೀಡಿದರು.
ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ವೈ.ಎ. ನಾರಾಯಣ ಸ್ವಾಮಿ, ಅ.ದೇವೇಗೌಡ, ಹಣಮಂತ ಎಚ್. ನಿರಾಣಿ, ಎಸ್. ಎಲ್. ಭೋಜೇಗೌಡ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.