ADVERTISEMENT

ಎಚ್‌.ಡಿ.ಕುಮಾರಸ್ವಾಮಿ ಜಾಮೀನು ರದ್ಧತಿ ಕೋರಿ ಎಸ್‌ಐಟಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 0:30 IST
Last Updated 22 ಅಕ್ಟೋಬರ್ 2024, 0:30 IST
<div class="paragraphs"><p>ಎಚ್‌.ಡಿ.ಕುಮಾರಸ್ವಾಮಿ</p></div>

ಎಚ್‌.ಡಿ.ಕುಮಾರಸ್ವಾಮಿ

   

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ (ಎಸ್‌ಎಸ್‌ವಿಎಂ) ಕಂಪನಿಗೆ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮಂಜೂರು ಮಾಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಲೋಕಾಯುಕ್ತದ ವಿಶೇಷ ತನಿಖಾ ತಂಡ (ಎಸ್‌ಐಟಿ) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಅರ್ಜಿ ಸಲ್ಲಿಸಿದೆ.

ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಎಸ್‌ಎಸ್‌ವಿಎಂ ಕಂಪನಿಗೆ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ. 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್‌. ಸಂತೋಷ್‌ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿಯಲ್ಲಿನ ಉಲ್ಲೇಖ ಆಧರಿಸಿ ಲೋಕಾಯುಕ್ತದ ಎಸ್‌ಐಟಿ ತನಿಖೆ ನಡೆಸುತ್ತಿದೆ.

ADVERTISEMENT

ಈ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯವು ಕುಮಾರಸ್ವಾಮಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. 2015ರ ಆಗಸ್ಟ್‌ನಲ್ಲಿ ಕುಮಾರಸ್ವಾಮಿ ಅವರು ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿ, ನ್ಯಾಯಾಲಯದ ಆದೇಶದಂತೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು.

‘ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಮತ್ತು ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರಲು ಪ್ರಯತ್ನ ಹಾಗೂ ಬೆದರಿಕೆ ಹಾಕುತ್ತಿರುವ ಆರೋಪಗಳ ಅಡಿಯಲ್ಲಿ ಕುಮಾರಸ್ವಾಮಿ ಅವರ ಜಾಮೀನು ರದ್ದುಗೊಳಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಅರ್ಜಿ ಸಲ್ಲಿಸಲಾಗಿದೆ’ ಎಂದು ಲೋಕಾಯುಕ್ತದ ಎಸ್‌ಐಟಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಈ ಪ್ರಕರಣದಲ್ಲಿ ತನಿಖೆ ಪೂರ್ಣಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು, ಕುಮಾರಸ್ವಾಮಿ ಅವರ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ರಾಜ್ಯಪಾಲರ ಅನುಮತಿ ಕೋರಿದ್ದಾರೆ. ರಾಜ್ಯಪಾಲರ ಕಚೇರಿಯು ಕೆಲವು ಸ್ಪಷ್ಟನೆಗಳನ್ನು ಕೋರಿತ್ತು. ಪುನಃ ಪ್ರಸ್ತಾವವನ್ನು ಸಲ್ಲಿಸಿರುವ ಎಸ್‌ಐಟಿ ಅಧಿಕಾರಿಗಳು, ಆರೋಪಪಟ್ಟಿ ಸಲ್ಲಿಸಲು ಅನುಮತಿ ಕೋರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.