ADVERTISEMENT

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: SIT ತನಿಖೆ- ಸಿಎಂ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2024, 16:26 IST
Last Updated 27 ಏಪ್ರಿಲ್ 2024, 16:26 IST
   

ಬೆಂಗಳೂರು: ‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ನೂರಾರು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಿಯೊ ದೃಶ್ಯಾವಳಿಗಳ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಗುರುವಾರ ಪತ್ರ ಬರೆದಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸುವಂತೆ ಶಿಫಾರಸು ಮಾಡಿದ್ದರು.

ADVERTISEMENT

‘ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ವಿಡಿಯೊ ತುಣುಕುಗಳನ್ನು ಗಮನಿಸಿದರೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಕಾರಣದಿಂದ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಈ ಮಧ್ಯೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ’ ಎಂದು ಮುಖ್ಯಮಂತ್ರಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.