ಬೆಂಗಳೂರು: ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸುತ್ತಿದ್ದಾರೆ.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ನಡೆಸುತ್ತಿರುವ ಯಾತ್ರೆ ರಾಜ್ಯದಲ್ಲಿ ಸೆ.30ರಂದು ಬೆಳಗ್ಗೆ 9ಕ್ಕೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಸೋನಿಯಾ ಗಾಂಧಿ ಭಾಗವಹಿಸುವ ದಿನಾಂಕ ಶೀಘ್ರ ನಿರ್ಧರಿಸಲಾಗುವುದು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪಕ್ಷದ ನಾಯಕರು ಯಾತ್ರೆ ಸಾಗುವ ಮಾರ್ಗದ ಸಿದ್ಧತೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಎಲ್ಲಾ ಪ್ರಮುಖ ನಾಯಕರಿಗೂ ಜವಾಬ್ದಾರಿ ನೀಡಲಾಗಿದೆ. ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅ.2ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ, ಬಳ್ಳಾರಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ. ದಸರಾ ಹಬ್ಬದ ಎರಡು ದಿನ ಯಾತ್ರೆ ಇರುವುದಿಲ್ಲ ಎಂದು ವಿವರ ನೀಡಿದರು.
ರಾಹುಲ್ ಗಾಂಧಿ ಅವರು ಯುವಕರು, ಮಹಿಳೆಯರು, ರೈತರು, ನಾಗರಿಕ ಸಮುದಾಯಗಳು, ವಿದ್ಯಾರ್ಥಿಗಳು, ಬುಡಕಟ್ಟು ಜನರ ಜತೆ ಮಾತುಕತೆ ನಡೆಸುವರು. ಪ್ರತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ, ಪಕ್ಷದ ಘಟಕಗಳು, ಜನಸಾಮಾನ್ಯರು, ನಾಗರಿಕ ಸಮಾಜದ ಗಣ್ಯರು, ಕಲಾವಿದರು, ಕೈಗಾರಿಕೋದ್ಯಮಿಗಳು, ಚಿಂತಕರು ರಾಹುಲ್ ಗಾಂಧಿ ಅವರ ಜತೆ ಹೆಜ್ಜೆ ಹಾಕುವರು ಎಂದರು.
ಎಐಸಿಸಿ ಅಧ್ಯಕ್ಷ ಸ್ಥಾನ ಕುರಿತು ಕೇಳಿದ ಪ್ರಶ್ನೆಗೆ, ರಾಹುಲ್ ಗಾಂಧಿ ಅವರು ಮುಂದಾಳತ್ವ ವಹಿಸಬೇಕು ಎನ್ನುವುದು ರಾಜ್ಯದ ನಾಯಕರ ಒತ್ತಾಸೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧ' ಎಂದು ಪ್ರತಿಕ್ರಿಯಿಸಿದರು.
ಭಾರತ್ ಜೋಡೊ ಯಾತ್ರೆಯ ಪೂರ್ವ ಸಿದ್ಧತಾ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮುಖಂಡರಾದ ಸಲೀಮ್ ಅಹ್ಮದ್, ರಾಮಲಿಂಗಾರೆಡ್ಡಿ, ಧ್ರುವ ನಾರಾಯಣ್, ಎಚ್.ಕೆ.ಪಾಟೀಲ್, ಆರ್.ವಿ. ದೇಶಪಾಂಡೆ, ಡಿ.ಕೆ.ಸುರೇಶ್, ಎಚ್.ಎಂ.ರೇವಣ್ಣ, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಎಚ್.ಸಿ.ಮಹದೇವಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.