ADVERTISEMENT

ಸೌಜನ್ಯಾ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 16:24 IST
Last Updated 4 ಜುಲೈ 2024, 16:24 IST
ಸೌಜನ್ಯಾ
ಸೌಜನ್ಯಾ   

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿದ ಹಾಗೂ ಸಿಬಿಐ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಸೌಜನ್ಯಾಳ ತಂದೆ ಚಂದಪ್ಪ ಗೌಡ, ಖುಲಾಸೆಗೊಂಡಿರುವ ಆರೋಪಿ ಕಾರ್ಕಳ ತಾಲ್ಲೂಕಿನ ಕುಕುಂದೂರಿನ ಸಂತೋಷ್‌ ರಾವ್‌ ಹಾಗೂ ಸಿಬಿಐ ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಮತ್ತು ಜೆ.ಎಂ. ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಮುಕ್ತಾಯಗೊಳಿಸಿತು.

‘ಸಂತೋಷ್ ರಾವ್ ಮತ್ತು ಚಂದಪ್ಪ ಗೌಡ ಅವರು ಪ್ರಕರಣದ ಮರು ತನಿಖೆಗೆ ಮನವಿ ಮಾಡಿದ್ದಾರೆ. ಈ ಹಿಂದೆ ಸೌಜನ್ಯಾಳ ತಂದೆಯೇ ಮರು ತನಿಖೆ ನಡೆಸುವಂತೆ ಕೋರಿದ್ದರು. ಈ ವಿಚಾರವನ್ನು ಹೈಕೋರ್ಟ್‌ನ ಬೇರೊಂದು ನ್ಯಾಯಪೀಠ ಈ ಹಿಂದೆಯೇ ನಿರ್ಧರಿಸಿದ್ದು, ಮರು ತನಿಖೆಗೆ ನಿರಾಕರಿಸಿತ್ತು. ಈಗ ಅದೇ ಪರಿಹಾರ ಕೋರಲಾಗದು’ ಎಂಬ ಸಿಬಿಐ ವಾದ ಹಾಗೂ ಇದಕ್ಕೆ ಪ್ರತಿವಾದ ಆಲಿಸಿದ ನ್ಯಾಯಪೀಠ, ಆದೇಶ ಕಾಯ್ದಿರಿಸಿರುವುದಾಗಿ ಪ್ರಕಟಿಸಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.