ಚನ್ನಪಟ್ಟಣ: ‘ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ, ಮನವಿ ಮಾಡಿದ್ದೇನೆ. ಇನ್ನೆರಡು ದಿನದಲ್ಲಿ ಅನುದಾನ ಬಿಡುಗಡೆಯಾಗಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದಲ್ಲಿ ಸೋಮವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮತ್ತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚನ್ನಪಟ್ಟ ಸೇರಿದಂತೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಮತ್ತು ಬಳ್ಳಾರಿಯ ಸಂಡೂರು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ. ವಿಶೇಷ ಅನುದಾನದೊಂದಿಗೆ ಈ ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ಅಭಿವೃದ್ಧಿಗೆ ಸರ್ಕಾರ ಮುಂದಾಗಲಿದೆ’ ಎಂದರು.
‘ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರು, ಚನ್ನಪಟ್ಟಣ ಸೇರಿದಂತೆ ಜಿಲ್ಲೆಗೆ ಹೊಸ ಕೈಗಾರಿಕೆ ತಂದರೆ, ನಮ್ಮ ಸರ್ಕಾರದಿಂದ ಸಂಪೂರ್ಣ ಸಹಕಾರ ಕೊಡಲು ನಾನು ಬದ್ಧ. ಕೈಗಾರಿಕೆಗಳನ್ನು ತಂದು, ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕೊಡಲಿ’ ಎಂದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
‘ರಾಜ್ಯದ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ನೆರವಾಗುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದೇವೆ. ಜೊತೆಗೆ ಮೇಕೆದಾಟು ಅಣೆಕಟ್ಟೆ ಯೋಜನೆ, ಮಹದಾಯಿ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಚರ್ಚೆ ಮಾಡಿದ್ದು, ಅವರು ಸಹ ಸಹಕಾರ ಕೊಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಪ್ರಧಾನಿ ಮೋದಿ ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿದರು.
‘ದುಡ್ಡು ಬಂದಿಲ್ಲ ಎಂದ ಮಹಿಳೆಯರು’
ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡಿ.ಕೆ. ಶಿವಕುಮಾರ್ ಅವರು, ತಮ್ಮ ಮಾತಿನ ಮಧ್ಯೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿ, ‘ಗೃಹಲಕ್ಷ್ಮಿ ದುಡ್ಡು ನಿಮಗೆ ಪ್ರತಿ ತಿಂಗಳು ಬರ್ತಿದೆಯಾ?’ ಎಂದು ಸಮಾರಂಭದಲ್ಲಿದ್ದ ಮಹಿಳೆಯರನ್ನು ಪ್ರಶ್ನಿಸಿದರು. ಅದಕ್ಕೆ ಮಹಿಳೆಯರು, ‘ಎರಡು ತಿಂಗಳಿಂದ ಬಂದಿಲ್ಲ’ ಎಂದರು. ಆಗ ಡಿಕೆಶಿ, ‘ಎರಡೂ ತಿಂಗಳ ಹಣ ಒಟ್ಟಿಗೆ ಬರುತ್ತದೆ. ಯಾರೂ ಚಿಂತೆ ಮಾಡಬೇಡಿ. ನಮ್ಮ ಗ್ಯಾರಂಟಿ ಯೋಜನೆಗಳೂ ಎಲ್ಲರಿಗೂ ತಲುಪುತ್ತವೆ. ಕ್ಷೇತ್ರದಲ್ಲಿ ಸರ್ಕಾರಿ ಕೆಲಸ ಮಾಡಿಸಿಕೊಳ್ಳಲು ಯಾರೂ ಲಂಚ ಕೊಡಬೇಕಾಗಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.