ನವದೆಹಲಿ: ಕರ್ನಾಟಕದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ವಿಶೇಷ ಅನುದಾನ ಮಂಜೂರು ಮಾಡಬೇಕೆಂಬ ಶಾಸಕರ ಬೇಡಿಕೆ ಕುರಿತು ಪರಿಶೀಲಿಸಲಾಗುವುದು’ ಎಂದು ಭರವಸೆ ನೀಡಿದರು.
ಗುರುವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಶಾಸಕರು ಒತ್ತಾಯಿಸುತ್ತಿದ್ದಾರೆ. ಕೆಲವು ಕ್ಷೇತ್ರಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ಉಳಿದ ಕ್ಷೇತ್ರಗಳಿಗೂ ಶೀಘ್ರದಲ್ಲಿಯೇ ಅನುದಾನ ನೀಡಲಾಗುವುದು’ ಎಂದರು.
ಐದು ಖಾತರಿ ಯೋಜನೆಗಳನ್ನು ಪರಿಷ್ಕರಣೆ ಮಾಡುವ ಅಥವಾ ಸ್ಥಗಿತಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಅವರು ಪುನರುಚ್ಚರಿಸಿದರು.
ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ ಶೇ 10ರಿಂದ 12 ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಅವರು ಪ್ರಶ್ನಿಸಿದರು.
‘ಈ ಬಗ್ಗೆ ಪ್ರಧಾನಿ, ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದು, ಇದನ್ನು ಆರ್‌ಬಿಐ ಒಪ್ಪಿಲ್ಲ ಎಂದು ಸಚಿವರು ಉತ್ತರವನ್ನೂ ಬರೆದಿದ್ದಾರೆ. ಕೇಂದ್ರ ಸರ್ಕಾರದ ಅಧೀನದಲ್ಲಿ ನಬಾರ್ಡ್ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ’ ಎಂದು ಅವರು ಪ್ರಶ್ನಿಸಿದರು.
ಕೇಂದ್ರದಿಂದ ಆಗಿರುವ ಅನ್ಯಾಯದ ಬಗ್ಗೆ ಆರ್.ಅಶೋಕ, ಬಿ.ಎಸ್.ಯಡಿಯೂರಪ್ಪ, ಬಸನಗೌಡ ಪಾಟೀಲ ಯತ್ನಾಳ, ಸಿ.ಟಿ.ರವಿ, ಎಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಮಾತನಾಡುವುದಿಲ್ಲ ಎಂದು ಅವರು ಕಿಡಿಕಾರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.