ADVERTISEMENT

ಡಿನೋಟಿಫಿಕೇಷನ್‌ ಪ್ರಕರಣ: ಏ.19ರಂದು ಬಿಎಸ್‌ವೈ ಹಾಜರಿಗೆ ಕೋರ್ಟ್‌ ಆದೇಶ

ಬೆಳ್ಳಂದೂರು, ಕಾಡುಬೀಸನಹಳ್ಳಿ ಜಮೀನು ಡಿನೋಟಿಫಿಕೇಷನ್‌ ಪ್ರಕರಣ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2022, 15:40 IST
Last Updated 26 ಮಾರ್ಚ್ 2022, 15:40 IST
   

ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐ.ಟಿ) ಕಾರಿಡಾರ್‌ ನಿರ್ಮಾಣಕ್ಕಾಗಿ ನಗರದ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್‌ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗೆ ಏಪ್ರಿಲ್‌ 19ರಂದು ಖುದ್ದು ಹಾಜರಾಗುವಂತೆ ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಸಮನ್ಸ್‌ ಜಾರಿಗೊಳಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

ವಾಸುದೇವ ರೆಡ್ಡಿ ಎಂಬುವವರು 2013ರಲ್ಲಿ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿರುವ ವಿಶೇಷ ನ್ಯಾಯಾಲಯ, ದೂರುದಾರರ ಪ್ರಮಾಣೀಕೃತ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಪೂರ್ಣಗೊಳಿಸಿದೆ. ಏ.19ರಿಂದ ಯಡಿಯೂರಪ್ಪ ಅವರನ್ನು ವಿಚಾರಣೆಗೊಳಪಡಿಸಲು ನಿರ್ಧರಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್‌ 13(1)(ಡಿ) ಮತ್ತು 13(2)ರ ಅಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಸಮನ್ಸ್‌ ಜಾರಿ ಮಾಡುವಂತೆ ನ್ಯಾಯಾಧೀಶ ಬಿ. ಜಯಂತ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಐ.ಟಿ. ಕಾರಿಡಾರ್‌ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡಿದ್ದ ಜಮೀನುಗಳನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪ ಯಡಿಯೂರಪ್ಪ ಮೇಲಿದೆ. ಕಾಂಗ್ರೆಸ್‌ ಶಾಸಕ ಆರ್‌.ವಿ. ದೇಶಪಾಂಡೆ, ಯಡಿಯೂರಪ್ಪ ಸೇರಿದಂತೆ ಹತ್ತು ಮಂದಿಯ ವಿರುದ್ಧ ವಾಸುದೇವ ರೆಡ್ಡಿ ಖಾಸಗಿ ದೂರು ಸಲ್ಲಿಸಿದ್ದರು. ದೇಶಪಾಂಡೆ ವಿರುದ್ಧದ ಪ್ರಕರಣವನ್ನು 2015ರಲ್ಲಿ ಹೈಕೋರ್ಟ್‌ ರದ್ದುಗೊಳಿಸಿತ್ತು. ಉಳಿದ ಎಂಟು ಜನರ ವಿರುದ್ಧದ ದೂರನ್ನು ವಿಚಾರಣಾ ನ್ಯಾಯಾಲಯ ರದ್ದುಗೊಳಿಸಿತ್ತು. ಯುಡಿಯೂರಪ್ಪ ವಿರುದ್ಧದ ಪ್ರಕರಣ ಮಾತ್ರ ಉಳಿದುಕೊಂಡಿದೆ.

ADVERTISEMENT

ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ‘ಯಡಿಯೂರಪ್ಪ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ’ ಎಂದು ಲೋಕಾಯುಕ್ತ ಪೊಲೀಸರು ಎರಡು ಬಾರಿ ‘ಬಿ’ ವರದಿ ಸಲ್ಲಿಸಿದ್ದರು. ಎರಡೂ ವರದಿಗಳನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಎರಡನೇ ‘ಬಿ’ ವರದಿಯನ್ನು 2021ರ ನವೆಂಬರ್‌ 27ರಂದು ತಿರಸ್ಕರಿಸಿದ್ದ ನ್ಯಾಯಾಲಯ, ನೇರವಾಗಿ ವಿಚಾರಣೆ ಆರಂಭಿಸುವ ತೀರ್ಮಾನ ಪ್ರಕಟಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.