ಬೆಂಗಳೂರು: ಕೋವಿಡ್ ಸಂಕಷ್ಟದ ಮಧ್ಯೆಯೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡುಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಕೋರ್ ವಿಷಯಗಳಿಗೆ ಸೋಮವಾರ (ಜುಲೈ 19) ಹಾಗೂ ಭಾಷಾ ವಿಷಯಗಳಿಗೆ ಇದೇ 22ರಂದು ಪರೀಕ್ಷೆ ನಡೆಯಲಿದೆ.
'ಪರೀಕ್ಷೆ ನಡೆಸಲು ಇಲಾಖೆ ಸಂಪೂರ್ಣ ಸಜ್ಜಾಗಿದೆ. ಈ ಬಾರಿ ಒಎಂಆರ್ ಶೀಟ್‌ನಲ್ಲಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ನೋಂದಣಿ ಸಂಖ್ಯೆಯನ್ನು ಸರಿಯಾಗಿ ನಮೂದಿಸಿರುವ ಬಗ್ಗೆ ಪರಿಶೀಲಿಸುವಂತೆ ಪರೀಕ್ಷಾ ಮೇಲ್ವಿಚಾರಕರಿಗೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ’ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದರು.
‘ಕಳೆದ ಬಾರಿ 3,310 ಇದ್ದ ಪರೀಕ್ಷಾ ಕೇಂದ್ರಗಳನ್ನು 4,885 ಹಾಗೂ 48 ಸಾವಿರ ಪರೀಕ್ಷಾ ಕೊಠಡಿಗಳನ್ನು 73,064ಕ್ಕೆ ಹೆಚ್ಚಿಸಲಾಗಿದೆ. ವಿದ್ಯಾರ್ಥಿಗಳಿಗೆ ಆದಷ್ಟು ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ. ಹಾಲ್ ಟಿಕೆಟ್ ಸಿಗಲಿಲ್ಲ ಎಂದು ಬಂದಿರುವ ದೂರುಗಳನ್ನು ಬಿಇಒ ಹಂತದಲ್ಲಿ ಪರಿಹರಿಸಲಾಗಿದೆ’ ಎಂದರು.
‘ಕೋವಿಡ್ ದೃಢಪಟ್ಟಿರುವ ವಿದ್ಯಾರ್ಥಿಗಳಿಗೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಜ್ವರ, ಕೆಮ್ಮು, ನೆಗಡಿ ಲಕ್ಷಣ ಕಂಡುಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಅಂಥ ವಿದ್ಯಾರ್ಥಿಗಳಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಮಾಸ್ಕ್ ಮರೆತು ಬಂದ ವಿದ್ಯಾರ್ಥಿಗಳಿಗೂ ಮಾಸ್ಕ್ ಕೊಡುವ ವ್ಯವಸ್ಥೆ ಮಾಡಲಾಗಿದೆ’ ಎಂದರು.
ತಿಂಗಳ ಅಂತ್ಯದಲ್ಲಿ ವರದಿ: ‘ಶಾಲೆಗಳಲ್ಲಿ ಯಾವ ತರಗತಿಗಳನ್ನು ಮೊದಲು ಆರಂಭಿಸಬೇಕು, ಯಾವಾಗ ಮತ್ತು ಯಾವ ರೀತಿ ಆರಂಭಿಸಬೇಕು ಎಂಬ ಬಗ್ಗೆ ಸಾವ೯ಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿರುವ ಕಾರ್ಯಪಡೆ ಈ ತಿಂಗಳ ಅಂತ್ಯದಲ್ಲಿ ವರದಿ ನೀಡಲಿದೆ’ ಎಂದು ಅವರು ತಿಳಿಸಿದರು.
‘ಶಾಲೆಗಳ ಪ್ರತಿನಿಧಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು, ನಿಮ್ಹಾನ್ಸ್ ವೈದ್ಯರು, ಜಯದೇವ ಆಸ್ಪತ್ರೆಯ ವೈದ್ಯರು, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಪ್ರತಿನಿಧಿಗಳು ಕಾರ್ಯಪಡೆಯಲಿದ್ದಾರೆ. ಈ ಕಾರ್ಯಪಡೆ ಸಭೆ ನಡೆಸಿ, ತೀರ್ಮಾನಿಸಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.