ಬೆಂಗಳೂರು: ನಟ ಯಶ್ ಜನ್ಮದಿನದ ಅಂಗವಾಗಿ ಬೃಹತ್ ಕಟೌಟ್ ನಿಲ್ಲಿಸುವಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಮೂವರು ಯುವಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹2 ಲಕ್ಷ ಪರಿಹಾರ ಘೋಷಿಸಿದೆ.
ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಅಂಬೇಡ್ಕರ್ ನಗರದ ಯಶ್ ಅಭಿಮಾನಿಗಳು ಭಾನುವಾರ ರಾತ್ರಿ ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವುದಕ್ಕೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಕಟೌಟ್ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ವಿದ್ಯುತ್ ಪ್ರವಹಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
‘ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಬದುಕಿ ಬಾಳಬೇಕಿದ್ದ ಯುವಕರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ. ಅವರನ್ನು ನಂಬಿದ್ದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ತಲಾ ₹2 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.