ADVERTISEMENT

ಉತ್ತರ ಕರ್ನಾಟಕ ನಿರ್ಲಕ್ಷಿಸಿದ ರಾಜ್ಯ ಸರ್ಕಾರ: ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2024, 14:01 IST
Last Updated 10 ಅಕ್ಟೋಬರ್ 2024, 14:01 IST
   

ಬೆಳಗಾವಿ: ‘ರಾಜ್ಯ ಸರ್ಕಾರ ಉತ್ತರ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಿದೆ. ಎಲ್ಲ ಸಚಿವರೂ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದಾರೆ. ಈ ಸರ್ಕಾರ ಕಾಮಗಾರಿಗಳ ಭೂಮಿಪೂಜೆ ಮಾಡಿದ್ದನ್ನೇ ನಾನು ನೋಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಗುದ್ದಲಿಯ ಮುಖವನ್ನೇ ನೋಡಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.

‘ಸಚಿವರು ಯಾರೂ ಜಿಲ್ಲೆಗಳ ಪ್ರವಾಸ ಮಾಡುತ್ತಿಲ್ಲ. ಆರಂಭದಿಂದಲೂ ಈ ಸರ್ಕಾರ ಕೋಮಾ ಸ್ಥಿತಿಯಲ್ಲೇ ಇದೆ’ ಎಂದು ಅವರು ನಗರದಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನನ್ನ ವಿರುದ್ಧ ಗಂಟೆಗಟ್ಟಲೇ ಮಾತನಾಡುತ್ತಾರೆ. ಆದರೆ, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮ ಪಂಚಾಯಿತಿ ನೌಕರರನ್ನು ಭೇಟಿ ಮಾಡಲು ಅವರ ಬಳಿ ಸಮಯವಿಲ್ಲ’ ಎಂದು ಕುಟುಕಿದರು.

ADVERTISEMENT

‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಮುಡಾ ಹಗರಣದ ಬಗ್ಗೆ ಚರ್ಚಿಸಿದರೆ ಮುಜುಗರವಾಗುತ್ತದೆ ಎಂದು ಅವರು ಪಲಾಯನವಾದ ಮಾಡಿದರು. ಈಗ ಮುಡಾ ಹಗರಣದಲ್ಲೂ ತಪ್ಪೊಪ್ಪಿಕೊಂಡು 14 ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಅಸಹಾಯಕರಾಗಿ ಕಾಣಿಸುತ್ತಿರುವ ಅವರು, ಆತ್ಮವಿಶ್ವಾಸ ಕಳೆದುಕೊಂಡಿದ್ದಾರೆ’ ಎಂದರು.

‘ರಾಜ್ಯದಲ್ಲಿ ನಾಲ್ಕು ತಿಂಗಳಿನಿಂದ ಜನರ ಪರವಾಗಿರುವ ಸರ್ಕಾರ ಇಲ್ಲ ಎಂಬಂಥ ವಾತಾವರಣ ನಿರ್ಮಾಣವಾಗಿದೆ. ಲೋಕಸಭೆ ಚುನಾವಣೆ ವೇಳೆ, ಗ್ಯಾರಂಟಿಗಳ ಬಗ್ಗೆ ಉದ್ದುದ್ದ ಭಾಷಣ ಮಾಡಿ, ಗೃಹಲಕ್ಷ್ಮಿ ಯೋಜನೆಯಡಿ ಮೂರು ಕಂತಿನ ಹಣ ಕೊಟ್ಟರು. ಈಗ ಎಲ್ಲವನ್ನೂ ಮರೆತಿದ್ದಾರೆ’ ಎಂದು ಟೀಕಿಸಿದರು.

ಸಚಿವ ಸತೀಶ ಜಾರಕಿಹೊಳಿ ಭೇಟಿಯಾದ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ‘ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ನಾನು ಭೇಟಿಯಾಗಿದ್ದೆ. ಇದರಲ್ಲಿ ರಾಜಕಾರಣ ಹುಡುಕುವ ಅವಶ್ಯಕತೆ ಇಲ್ಲ. ನಮ್ಮ ಪಕ್ಷದೊಂದಿಗೆ ಎಲ್ಲ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ಒಳ್ಳೆಯದು’ ಎಂದರು.

ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಧುರ್ಯೋದನ ಐಹೊಳೆ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ, ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ನಗರದ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಮಹೇಶ ಕುಮಠಳ್ಳಿ, ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಮಹಾಂತೇಶ ಕವಟಗಿಮಠ, ಅರುಣ ಶಹಾಪುರ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.