ಬೆಂಗಳೂರು: 'ಎಸ್‌ಡಿಪಿಐ ಹಾಗೂ ಪಿಎಫ್ಐ ಸಂಘಟನೆ ನಿಷೇಧಿಸಬೇಕು. ಗೃಹ ಸಚಿವರು ರಾಜೀನಾಮೆ ನೀಡಬೇಕು' ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು, ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಜಯಮಹಲ್‌ನಲ್ಲಿರುವ ಗೃಹ ಸಚಿವರ ಮನೆಗೆ ಬೆಳಿಗ್ಗೆ ಬಂದಿದ್ದ ಕಾರ್ಯಕರ್ತರು, ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ಆರಂಭಿಸಿದರು. ಕೆಲ ಹೊತ್ತಿನ ನಂತರ, ಗೇಟ್ ತಳ್ಳಿ ಒಳನುಗ್ಗಿದ್ದರು.
ಮನೆಯ ಬಾಗಿಲು ಬಳಿ ಕುಳಿತು ಪ್ರತಿಭಟನೆ ಮುಂದುವರಿಸಿದ ಕಾರ್ಯಕರ್ತರು, 'ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಆಗ್ರಹಿಸಿದರು.
ಇದೇ ವೇಳೆ ಪೊಲೀಸರು, ಕಾರ್ಯಕರ್ತರನ್ನು ಮನೆಯಿಂದ ಹೊರಗೆ ಕಳುಹಿಸಲು ಮುಂದಾದರು. ಆಗ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಯಿತು.
ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಲಘು ಲಾಠಿ ಪ್ರಹಾರ ನಡೆಸಿದ ಪೊಲೀಸರು, ಕಾರ್ಯಕರ್ತರನ್ನು ಸ್ಥಳದಿಂದ ಚದುರಿಸಿದರು. 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದರು. ಸದ್ಯ ಗೃಹ ಸಚಿವರ ಮನೆ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.