ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆಗೆ ತಡೆಯಾಜ್ಞೆ ನೀಡಿರುವ ಆದೇಶ ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಗೊಳಿಸಲು ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠವು ನಿರ್ದೇಶನ ನೀಡಿದೆ.
‘ತನಿಖೆಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿರಲಿಲ್ಲ. ವಿಭಾಗೀಯ ಪೀಠ ತಡೆ ನೀಡಿತ್ತು. ತಡೆಯಾಜ್ಞೆ ರದ್ದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದ ತನಿಖೆಗೆ ಅನುಮತಿ ನೀಡಬೇಕು’ ಎಂದು ಸಿಬಿಐ ವಕೀಲರು ಮನವಿ ಮಾಡಿದರು.
‘ಪ್ರಕರಣದ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಹಾಗಾಗಿ, ಅಲ್ಲೇ ಇತ್ಯರ್ಥಪಡಿಸಿಕೊಳ್ಳುವುದು ಸೂಕ್ತ. 15 ದಿನಗಳಲ್ಲಿ ಇದನ್ನು ಇತ್ಯರ್ಥಪಡಿಸಬೇಕು’ ಎಂದು ಪೀಠ ನಿರ್ದೇಶನ ನೀಡಿತು.
2017ರಲ್ಲಿ ಶಿವಕುಮಾರ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದರು. ಆಗ, ದೆಹಲಿಯ ವಿವಿಧ ಸ್ಥಳಗಳಲ್ಲಿ ₹ 8.59 ಕೋಟಿ ನಗದು ವಶಕ್ಕೆ ಪಡೆಯಲಾಗಿತ್ತು. ಬಳಿಕ ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. ನಂತರ ಅವರಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಿತ್ತು. ಸಿಬಿಐ ತನಿಖೆಗೆ ಇ.ಡಿ. ಶಿಫಾರಸು ಮಾಡಿತ್ತು. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಸಿಬಿಐ ತನಿಖೆಗೆ ಒಪ್ಪಿಗೆ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.