ADVERTISEMENT

ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ತಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಅಕ್ಟೋಬರ್ 2024, 7:12 IST
Last Updated 21 ಅಕ್ಟೋಬರ್ 2024, 7:12 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಕರ್ನಾಟಕದ 8, 9 ಮತ್ತು 10ನೇ ತರಗತಿಗಳಿಗೆ ಅರ್ಧ ವಾರ್ಷಿಕ ಮೌಲ್ಯಾಂಕನ (ಬೋರ್ಡ್‌) ಪರೀಕ್ಷೆಗಳನ್ನು ನಡೆಸಿದ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ಮುಂದಿನ ಆದೇಶದವರೆಗೆ ಬೋರ್ಡ್‌ ನಡೆಸದಂತೆ ಅಥವಾ ಈಗಾಗಲೇ ನಡೆದಿರುವ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧ ವಿಧಿಸಿದೆ. 

ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಒಕ್ಕೂಟ ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಹಾಗೂ ಸತೀಶ್‌ ಚಂದ್ರ ಶರ್ಮಾ ಪೀಠವು, ‘ವಿದ್ಯಾರ್ಥಿಗಳ ಕತ್ತು ಹಿಸುಕುವ ಕೆಲಸ ಮಾಡಬೇಡಿ’ ಎಂದು ಕಟುವಾಗಿ ಹೇಳಿತು. ಸರ್ಕಾರದ ನಿರ್ಧಾರ ಸಮರ್ಥಿಸಿದ ಹಿರಿಯ ವಕೀಲ ದೇವದತ್‌ ಕಾಮತ್‌ ನೇತೃತ್ವದ ರಾಜ್ಯದ ವಕೀಲರ ತಂಡವನ್ನು ತರಾಟೆಗೆ ತೆಗೆದುಕೊಂಡಿತು. 

ADVERTISEMENT

‘ರಾಜ್ಯದ ಏಳು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 5, 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ’ ಎಂದು ಕಾಮತ್ ಅವರು ನ್ಯಾಯಪೀಠಕ್ಕೆ ತಿಳಿಸಿದರು. 24 ಜಿಲ್ಲೆಗಳಲ್ಲಿ ಸದ್ದಿಲ್ಲದೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದರ ಸುತ್ತೋಲೆ ಹಿಂಪಡೆಯುವ ಬಗ್ಗೆ ಸರ್ಕಾರ ಚಕಾರ ಎತ್ತಿಲ್ಲ. ಫಲಿತಾಂಶಕ್ಕೆ ತಡೆ ನೀಡಬೇಕು’ ಎಂದು ಅರ್ಜಿದಾರರ ಪರ ವಕೀಲ ಕೆ.ವಿ.ಧನಂಜಯ ಕೋರಿದರು. 

ಈ ರೀತಿಯ ವಿಧಾನವನ್ನು ಎಲ್ಲಿಯೂ ಅಳವಡಿಸಿಕೊಂಡಿಲ್ಲ. ಸರ್ಕಾರಕ್ಕೆ ವಿದ್ಯಾರ್ಥಿಗಳ ಕಲ್ಯಾಣದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಉತ್ತಮ ಶಾಲೆಗಳನ್ನು ತೆರೆಯಿರಿ. 8, 9 ಮತ್ತು 10 ನೇ ತರಗತಿಗಳಿಗೆ ಅರ್ಧವಾರ್ಷಿಕ ಪರೀಕ್ಷೆಯನ್ನು ಯಾವುದೇ ಜಿಲ್ಲೆಯಲ್ಲಿ ನಡೆಸದಿದ್ದರೆ, ಆ ಜಿಲ್ಲೆಗಳಲ್ಲಿ ನಡೆಸಲು ಅನುಮತಿ ನೀಡುವುದಿಲ್ಲ ಎಂದು ನ್ಯಾಯಾಧೀಶರು ತಾಕೀತು ಮಾಡಿದ್ದಾರೆ.

ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು. ಬಾಕಿ ಜಿಲ್ಲೆಗಳಲ್ಲಿ ಸಾರ್ವಜನಿಕರ ಗಮನಕ್ಕೆ ತಾರದೇ ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಬೋರ್ಡ್ ಪರೀಕ್ಷೆ ವಿವಾದವಾಗುತ್ತಿದ್ದಂತೆ ಉತ್ತರ ಕರ್ನಾಟಕದ ಏಳು ಜಿಲ್ಲೆಗಳ ಫಲಿತಾಂಶಕ್ಕೆ ಸರ್ಕಾರ ತಡೆ ನೀಡಿತ್ತು. ಸರ್ಕಾರದ ನಿಲುವು ಪ್ರಶ್ನಿಸಿ ಖಾಸಗಿ ಶಾಲೆಗಳ ಪರ ವಕೀಲ ಕೆ.ವಿ.ಧನಂಜಯ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಕಳೆದ ವರ್ಷದ ಆದೇಶ ಉಲ್ಲೇಖಿಸಿ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ತರಾಟೆ ತೆಗೆದುಕೊಂಡಿದೆ.

ಪರೀಕ್ಷೆಯ ನಿಖರವಾದ ವಿವರಗಳನ್ನು ನೀಡುವ ಪ್ರಮಾಣಪತ್ರವನ್ನು ನಾಲ್ಕು ವಾರಗಳಲ್ಲಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಪೀಠ ಸೂಚಿಸಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.