ಬೆಂಗಳೂರು: ತಮ್ಮ ಪಕ್ಷದ ಕಾರ್ಯಕರ್ತರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿದಡಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಪುನಃ ಇಂತಹ ಅಪರಾಧ ಎಸಗಬಾರದು ಎಂಬ ಷರತ್ತು ವಿಧಿಸಿದೆ.
ಇನ್ನೊಂದು ಪ್ರಕರಣದಲ್ಲಿಯೂ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದರಿಂದ ಸೂರಜ್ ರೇವಣ್ಣ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಈ ಸಂಬಂಧ ಸೂರಜ್ ರೇವಣ್ಣ ಸಲ್ಲಿಸಿದ್ದ ರೆಗ್ಯುಲರ್ ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೋಮವಾರ ಪುರಸ್ಕರಿಸಿ ಆದೇಶಿಸಿದ್ದಾರೆ.
ಷರತ್ತುಗಳು
‘ಸೂರಜ್ ₹2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು. ಸಂಬಂಧಿಸಿದ ನ್ಯಾಯಾಲಯದ ಅನುಮತಿ ಪಡೆಯದೆ ದೇಶ ಬಿಟ್ಟು ತೆರಳುವಂತಿಲ್ಲ. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು, ದೂರುದಾರ ಮತ್ತು ಸಂತ್ರಸ್ತರಿಗೆ ಬೆದರಿಕೆ ಹಾಕಬಾರದು. ತನಿಖೆಗೆ ಸಹಕರಿಸಬೇಕು. ತನಿಖಾಧಿಕಾರಿ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು. ತಿಂಗಳ ಎರಡನೇ ಭಾನುವಾರ ಬೆಳಿಗ್ಗೆ 9ರಿಂದ ಸಂಜೆ 5ರ ಒಳಗೆ ತನಿಖಾಧಿಕಾರಿ ಮುಂದೆ ಆರು ತಿಂಗಳು ಅಥವಾ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವವರೆಗೆ ಹಾಜರಾಗಬೇಕು. ಇಂತಹುದೇ ಅಪರಾಧದಲ್ಲಿ ಭಾಗಿಯಾಗಬಾರದು’ ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಇದೇ ಷರತ್ತುಗಳನ್ನು ನಿರೀಕ್ಷಣಾ ಜಾಮೀನಿಗೂ ಅನ್ವಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.