ನವದೆಹಲಿ: ಯಾದಗಿರಿ ನಗರ ಠಾಣೆಯ ಪಿಎಸ್‌ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಕೇಂದ್ರ ಗೃಹ ಸಚಿವಾಲಯ ಪತ್ರ ಬರೆದಿದೆ.
ಈ ಪ್ರಕರಣದ ತನಿಖೆಯನ್ನು ಸಿಬಿಐ ಮೂಲಕ ನಡೆಸಬೇಕು ಎಂದು ಆಗ್ರಹಿಸಿ ಕೇಂದ್ರ ಸಣ್ಣ, ಮಧ್ಯಮ ಕೈಗಾರಿಕೆ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಳೆದ ತಿಂಗಳು ಪತ್ರ ಬರೆದಿದ್ದರು.
‘ಪಿಎಸ್‌ಐ ಸಾವಿಗೆ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಪುತ್ರ ಪಂಪನಗೌಡ ಅವರು ಹಣಕ್ಕೆ ಬೇಡಿಕೆ ಇಟ್ಟಿರುವುದೇ ಕಾರಣ. ಪರಶುರಾಮ್ ಅವರು 7 ತಿಂಗಳಿಂದ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರನ್ನು ಮತ್ತೆ ಸೆನ್ ಠಾಣೆಗೆ ವರ್ಗಾವಣೆ ಮಾಡಿ ನಗರ ಠಾಣೆಯಲ್ಲಿ ಮುಂದುವರಿಯಲು ₹30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಪ್ರಕರಣದಲ್ಲಿ ಬಹು ಆಯಾಮಗಳು ಇವೆ. ಜತೆಗೆ, ಪೊಲೀಸರು ಕಾಟಾಚಾರಕ್ಕೆ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದ ಸಮಗ್ರ ತನಿಖೆ ನಡೆಸಲು ಸಿಬಿಐಗೆ ವಹಿಸುವುದೇ ಸೂಕ್ತ’ ಎಂದು ಅವರು ಪತ್ರದಲ್ಲಿ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.