ADVERTISEMENT

ಹೆಚ್ಚುತ್ತಿರುವ ಡೆಂಗಿ ಪ್ರಕರಣ: ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 10 ಜುಲೈ 2024, 9:21 IST
Last Updated 10 ಜುಲೈ 2024, 9:21 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಬೆಂಗಳೂರು ಮಹಾನಗರವೂ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಡೆಂಗಿ ಜ್ವರ ಪ್ರಕರಣಗಳ ಹೆಚ್ಚಳವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿಕೊಂಡಿದೆ.

ಬುಧವಾರ ಬೆಳಗಿನ ಕಲಾಪ ಆರಂಭವಾಗುತ್ತಿದ್ದಂತೆಯೇ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಮುಕ್ತ ಕಲಾಪದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿತು.

"ಡೆಂಗಿ ಜ್ವರ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸುವ ಅಗತ್ಯವಿದೆ ಎಂದು "ಡೆಕ್ಕನ್ ಹೆರಾಲ್ಡ್" ದಿನಪತ್ರಿಕೆಯ ಮಂಗಳವಾರದ (ಜುಲೈ 9) ಸಂಚಿಕೆಯಲ್ಲಿ ರಾಯಚೂರು ನಿವಾಸಿ ಎಚ್.ಕೆ. ವಿಜಯಕುಮಾರ್ ಅವರು ವಾಚಕರ ವಾಣಿಗೆ ಬರೆದ ಪತ್ರವನ್ನು ಆಧರಿಸಿ ಈ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಲು ಆದೇಶಿಸಲಾಗುತ್ತಿದೆ" ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು.

ADVERTISEMENT

ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.

"ಪ್ರತಿವಾದಿಗಳಾದ ಸಂಬಂಧಿತ ಪ್ರಾಧಿಕಾರಗಳಿಗೆ ಅರ್ಜಿ ರವಾನೆಯಾಗುವವರೆಗೆ ಕಾಯಬಾರದು. ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಇಂದೇ ನೋಟಿಸ್ ತಲುಪುವಂತೆ ನೋಡಿಕೊಳ್ಳಬೇಕು" ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದರು.

ಸರ್ಕಾರದ ಪರವಾಗಿ ನೋಟಿಸ್ ಪಡೆಯುವುದಾಗಿ ಸರ್ಕಾರಿ ವಕೀಲ ಎಸ್.ಎಸ್. ಮಹೇಂದ್ರ ನ್ಯಾಯಪೀಠಕ್ಕೆ ತಿಳಿಸಿದರು. ಇದೇ ವೇಳೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ ಅವರು, "ನ್ಯಾಯಾಲಯದ ಆದೇಶವನ್ನು ತಕ್ಷಣವೇ ಮುಖ್ಯ ಕಾರ್ಯದರ್ಶಿ ಮತ್ತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಮುಂದಿನ ವಿಚಾರಣೆ ವೇಳೆಗೆ ಅನುಪಾಲನಾ ವರದಿ ಸಲ್ಲಿಸಲಾಗುವುದು" ಎಂದು ತಿಳಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, "ಡೆಂಗಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಇದೇ 23ರೊಳಗೆ ಪ್ರತಿಕ್ರಿಯೆ ಸಲ್ಲಿಸಿ" ಎಂದು ನಿರ್ದೇಶಿಸಿ ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಿತು.

"ಉತ್ತಮ ವಾತಾವರಣದಲ್ಲಿ ಬದುಕುವುದು ಸಂವಿಧಾನದ 21ನೇ ವಿಧಿಯಡಿ ಮೂಲಭೂತ ಹಕ್ಕು. ಬೆಂಗಳೂರು ನಗರವೂ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಸೊಳ್ಳೆಗಳನ್ನು ನಿಯಂತ್ರಿಸಿ ಡೆಂಗಿ ಜ್ವರ ಹರಡದಂತೆ ತಡೆಯಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮ, ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದಾದ್ಯಂತ ಡೆಂಗಿ ರೋಗಿಗಳಿಗೆ ಕಲ್ಪಿಸಿರುವ ವೈದ್ಯಕೀಯ ಸೌಲಭ್ಯಗಳ ವಿವರ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತಾಗಿ ವಿವರಣೆ ನೀಡಬೇಕು" ಎಂದು ಈ ಕುರಿತ ಆದೇಶದಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.