ADVERTISEMENT

ನಾಲ್ಕು ವರ್ಷದಿಂದ ನಡೆಯದ ತಾ.ಪಂ–ಜಿ.ಪಂ ಚುನಾವಣೆ: ಹೈಕೋರ್ಟ್‌ ಅಚ್ಚರಿ

ಪಿಟಿಐ
Published 12 ಆಗಸ್ಟ್ 2024, 15:55 IST
Last Updated 12 ಆಗಸ್ಟ್ 2024, 15:55 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆಯೇ ನಡೆದಿಲ್ಲವೇ’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರದ ನಡೆಗೆ ಅತೀವ ಅಚ್ಚರಿ ವ್ಯಕ್ತಪಡಿಸಿದೆ.

ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮತ್ತು ‘ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸುವ ನಿಟ್ಟಿನಲ್ಲಿ, ಏಕಸದಸ್ಯ ನ್ಯಾಯಪೀಠದ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಆಕ್ಷೇಪಿಸಲಾದ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಹಿರ್, ‘ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳು ಆಡಳಿತಾಧಿಕಾರಿಗಳ ಅಧೀನದಲ್ಲಿವೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ADVERTISEMENT

ಈ ಮಾತಿಗೆ ಆಶ್ಚರ್ಯ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿಗಳು, ‘ಅಧಿಕಾರ ವಿಕೇಂದ್ರೀಕರಣಕ್ಕೆ ಸಂಬಂಧಿಸಿದ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯಿಂದ ಕರ್ನಾಟಕಕ್ಕೆ ಏನಾದರೂ ವಿನಾಯಿತಿ ಇದೆಯೇ’ ಎಂದು ರಾಜ್ಯ ಸರ್ಕಾರವನ್ನು ಕುಟುಕಿದರು.

ಇದಕ್ಕೆ ಸಮಜಾಯಿಷಿ ನೀಡಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ‘ಲೋಕಸಭೆ ಚುನಾವಣೆ ಹಾಗೂ ಇನ್ನಿತರ ಕಾರಣಗಳಿಗೆ ತಾ.ಪಂ. ಜಿ.ಪಂ ಚುನಾವಣೆ ವಿಳಂಬವಾಗಿದೆ. ಈಗಾಗಲೇ ರಾಜ್ಯದ 31 ಜಿ.ಪಂ.ಗಳ ಕ್ಷೇತ್ರ ಪುನರ್‌ವಿಂಗಡಣೆ ಕಾರ್ಯ ಮುಗಿದಿದೆ. ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇದಕ್ಕೆ ಇನ್ನೂ ನಾಲ್ಕು ವಾರಗಳು ಬೇಕು’ ಎಂದರು.

ಪ್ರತಿಯಾಗಿ ನ್ಯಾಯಪೀಠ, ‘ಕ್ಷೇತ್ರ ಪುನರ್‌ವಿಂಗಡಣೆ, ಮೀಸಲಾತಿ ನಿಗದಿಪಡಿಸುವುದು ಚುನಾವಣಾ ಆಯೋಗದ ಕೆಲಸವಲ್ಲವೇ’ ಎಂದು ಪ್ರಶ್ನಿಸಿತು. ಇದಕ್ಕೆ, ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ‘ಮೊದಲು ಆ ಆಧಿಕಾರ ಆಯೋಗದ ಬಳಿಯೇ ಇತ್ತು. ಆದರೆ, ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಆ ಅಧಿಕಾರವನ್ನು ಆಯೋಗದಿಂದ ಕಿತ್ತುಕೊಂಡಿದೆ’ ಎಂದು ವಿವರಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.