ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೈಗೊಳ್ಳುವ ₹ 50 ಕೋಟಿಗಿಂತ ಹೆಚ್ಚು ಮೊತ್ತದ ಕಾಮಗಾರಿಗಳು ಹಾಗೂ
ಖರೀದಿಗೆ ಸಂಬಂಧಿಸಿದ ಟೆಂಡರ್ ದಾಖಲೆಗಳು ಹಾಗೂ ಅಂದಾಜು ಪಟ್ಟಿಗಳನ್ನು ಟೆಂಡರ್ ಪೂರ್ವದಲ್ಲೇ ಪರಿಶೀಲಿಸುವುದಕ್ಕಾಗಿ
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ರತ್ನಕಲಾ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ.
ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ (ಎಂಜಿನಿಯರಿಂಗ್ ತಜ್ಞ) ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ (ಹಣಕಾಸು ತಜ್ಞ) ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆಯ ಅಡಿಯಲ್ಲಿ ಈ ಸಮಿತಿಯು ಕಾರ್ಯನಿರ್ವಹಿಸಲಿದೆ ಎಂದು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಶನಿವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
₹ 50 ಕೋಟಿ ಮತ್ತು ಅದಕ್ಕಿಂತ ಹೆಚ್ಚಿನ ವೆಚ್ಚದ ಎಲ್ಲ ನಿರ್ಮಾಣ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಂಗ್ರಹಣೆಯ ಟೆಂಡರ್ ಪ್ರಕ್ರಿಯೆಗಳು ಈ ಸಮಿತಿಯ ವ್ಯಾಪ್ತಿಗೆ ಬರಲಿವೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಟೆಂಡರ್ ಹಂತದಲ್ಲೇ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕಾರಣದಿಂದ ಟೆಂಡರ್ ಪರಿಶೀಲನೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಲು 2021ರ ಡಿಸೆಂಬರ್ 12 ರಂದು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಅದರ ಅನುಸಾರ ಸಮಿತಿ ರಚಿಸಲಾಗಿದೆ.
ಸಮಿತಿಯ ಅಧ್ಯಕ್ಷರಿಗೆ ಮಾಸಿಕ ₹ 2 ಲಕ್ಷ ಮತ್ತು ಸದಸ್ಯರಿಗೆ ಮಾಸಿಕ ತಲಾ ₹ 1 ಲಕ್ಷ ಗೌರವ ಧನ ನಿಗದಿಪಡಿಸಲಾಗಿದೆ. ಸಭೆ ಹಾಗೂ ಪ್ರವಾಸ ಭತ್ಯೆಗಳನ್ನೂ ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.