ADVERTISEMENT

ಪಂಚಮಸಾಲಿ ಸಮುದಾಯವನ್ನು 2ಎ ವರ್ಗಕ್ಕೆ ಸೇರಿಸುವಂತೆ ಆಗ್ರಹ

ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಠಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 8:10 IST
Last Updated 10 ಅಕ್ಟೋಬರ್ 2020, 8:10 IST
ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು.
ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು.   

ಬೆಂಗಳೂರು: ರಾಜ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ ‘2ಎ’ಗೆ ಸೇರಿಸಬೇಕು ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.

ಪಂಚಮಸಾಲಿ ಸಮುದಾಯದ ಮುಖಂಡರೊಂದಿಗೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗ ಪಂಚಮಸಾಲಿ ಸಮುದಾಯ ಪ್ರವರ್ಗ ‘3ಬಿ’ ಪಟ್ಟಿಯಲ್ಲಿದೆ. ಇದರಿಂದ ಸಮುದಾಯಕ್ಕೆ ಅನ್ಯಾಯ ಆಗುತ್ತಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶ ಕಲ್ಪಿಸುವ ಉದ್ದೇಶದಿಂದ ಪಂಚಮಸಾಲಿ‌‌ ಸಮುದಾಯವನ್ನು ಪ್ರವರ್ಗ ‘2ಎ’ಗೆ ಸೇರಿಸಬೇಕು’ ಎಂದು ಆಗ್ರಹಿಸಿದರು.

ರಾಜ್ಯದ ಜಾತಿಗಳ ಪಟ್ಟಿಯಲ್ಲಿ ಪಂಚಮಸಾಲಿ ಸಮುದಾಯವನ್ನು ಸರಿಯಾಗಿ ಗುರುತಿಸಿಲ್ಲ.‌ ಈ ಕಾರಣದಿಂದ ಮೀಸಲಾತಿಯ ಲಾಭ ಪಡೆಯಲು ಆಗಿಲ್ಲ. ಪಂಚಮಸಾಲಿ ಸಮುದಾಯವನ್ನು ಪ್ರವರ್ಗ ‘2ಎ’ಗೆ ಸೇರಿಸುವಂತೆ ಆಗ್ರಹಿಸಿ ಅಕ್ಟೋಬರ್ 28ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಒಂದು ದಿನದ ಸತ್ಯಾಗ್ರಹ ನಡೆಸಲಾಗುವುದು ಎಂದು ಸ್ವಾಮೀಜಿ ಪ್ರಕಟಿಸಿದರು.

ADVERTISEMENT

ಮುಖ್ಯಮಂತ್ರಿ ಸ್ಥಾನ ನೀಡಬೇಕು: ಪಂಚಮಸಾಲಿ ಜನರು ಬಿಜೆಪಿಗೆ ಹೆಚ್ಚಿನ ಬೆಂಬಲ ನೀಡುತ್ತಾ ಬಂದಿದ್ದಾರೆ. ಈಗ ಸಮುದಾಯದ 16 ಶಾಸಕರು ಮತ್ತು ಮೂವರು ಸಂಸದರು ಇದ್ದಾರೆ. ಆದರೆ, ಅಧಿಕಾರ ಹಂಚಿಕೆಯಲ್ಲಿ ನ್ಯಾಯ ದೊರಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಶಾಸಕ‌ ಮಹೇಶ್ ಕುಮಠಳ್ಳಿ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಸಂಖ್ಯೆಗೆ ಅನುಗುಣವಾಗಿ ಪಂಚಮಸಾಲಿ ಶಾಸಕರಲ್ಲಿ ಮೂವರು ಸಂಪುಟದಲ್ಲಿ ಇರಬೇಕಿತ್ತು. ಆದರೆ, ಅವಕಾಶ ನೀಡಿಲ್ಲ.‌ ಈ ಅನ್ಯಾಯವನ್ನು ಸರಿಪಡಿಸಲು ಮುಂದಿನ ಮುಖ್ಯಮಂತ್ರಿ ಸ್ಥಾನವನ್ನು ಪಂಚಮಸಾಲಿ ನಾಯಕರಿಗೆ ನೀಡಬೇಕು’ ಎಂದು ಆಗ್ರಹಿಸಿದರು.

‘ಬಿ.ಎಸ್. ಯಡಿಯೂರಪ್ಪ ಅವರು ಎಷ್ಟು ದಿನ ಮುಖ್ಯಮಂತ್ರಿ ಹುದ್ದೆಯಲ್ಲಿ ಇರುತ್ತಾರೋ ಗೊತ್ತಿಲ್ಲ. ಅವರ ನಂತರ ಪಂಚಮಸಾಲಿ ನಾಯಕರೇ ರಾಜ್ಯದ ಮುಖ್ಯಮಂತ್ರಿ ಆಗಬೇಕು’ ಎಂದು ಸ್ವಾಮೀಜಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.