ನವದೆಹಲಿ: ‘ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರನ್ನು ಶುಕ್ರವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದ್ದರು.
ಆ ಬೆನ್ನಲ್ಲೆ ‘ಪ್ರಜಾವಾಣಿ’ ಜೊತೆ ಮಾತನಾಡಿದ ವೇಣುಗೋಪಾಲ್, ‘ನಾವು ಮುಖ್ಯಮಂತ್ರಿಗೆ ಪೂರ್ಣ ಬೆಂಬಲ ನೀಡುತ್ತೇವೆ. ಪಕ್ಷದ ಕೇಂದ್ರ ನಾಯಕತ್ವವಷ್ಟೇ ಅಲ್ಲ, ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಡೀ ಕರ್ನಾಟಕ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಪರ ನಿಂತಿದೆ’ ಎಂದರು.
‘ಸಿದ್ದರಾಮಯ್ಯ ಭ್ರಷ್ಟ ಎಂದರೆ ಯಾರೂ ನಂಬುವುದಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಮತ್ತು ಹಿಂದುಳಿದ ವರ್ಗದಿಂದ ಬಂದ ಮುಖ್ಯಮಂತ್ರಿಯನ್ನು ಪದಚ್ಯುತಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಮುಖ್ಯಮಂತ್ರಿ ವಿರುದ್ಧ ಪಿತೂರಿ ನಡೆಯುತ್ತಿದೆ. ಹೀಗಾಗಿ, ಅವರ ಬೆಂಬಲಕ್ಕೆ ಹೈಕಮಾಂಡ್ ಗಟ್ಟಿಯಾಗಿ ನಿಲ್ಲಲಿದೆ ಎನ್ನುವುದನ್ನು ಸಿದ್ದರಾಮಯ್ಯ ಅವರಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ’ ಎಂದರು.
‘ಆಧಾರರಹಿತ ಆರೋಪಗಳು ಮತ್ತು ರಾಜ್ಯಪಾಲರ ಕಚೇರಿ ಬಳಸಿ ಸಿದ್ದರಾಮಯ್ಯ ಅವರನ್ನು ಗುರಿ ಮಾಡುತ್ತಿರುವ ಬಿಜೆಪಿಯ ಷಡ್ಯಂತ್ರವನ್ನು ಕಾಂಗ್ರೆಸ್ ಬಹಿರಂಗಪಡಿಸಲಿದೆ’ ಎಂದೂ ಹೇಳಿದರು.
‘ಈ ವರ್ಷದ ಆರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬೆಂಬಲಿಸಿದ ಮಾದರಿಯಲ್ಲಿ, ಬೆಂಗಳೂರಿನಲ್ಲಿಯೂ ಜಂಟಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳುವ ಕುರಿತು ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳ ಜೊತೆ ಚರ್ಚೆ ನಡೆಸಲಾಗುತ್ತಿದೆ’ ಎಂದರು.
‘ಕರ್ನಾಟಕದಲ್ಲಿ ‘ಗ್ಯಾರಂಟಿ’ ಯೋಜನೆಗಳು ಜಾರಿಗೆ ಬಂದ ನಂತರ ಸಿದ್ದರಾಮಯ್ಯ ಅವರ ಜನಪ್ರಿಯತೆ ಹೆಚ್ಚಿದೆ. ಇದು ಬಿಜೆಪಿಯ ಭೀತಿಗೆ ಕಾರಣವಾಗಿದೆ. ಪಕ್ಷದ ಸಿದ್ಧಾಂತ ಮತ್ತು ಸಿದ್ದರಾಮಯ್ಯ- ಡಿ.ಕೆ. ಶಿವಕುಮಾರ್ ನಾಯಕತ್ವದ ಪರಿಣಾಮ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ’ ಎಂದೂ ವೇಣುಗೋಪಾಲ್ ಹೇಳಿದರು.
‘ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ತ್ವರಿತವಾಗಿ ಅನುಮತಿ ನೀಡಿರುವ ರಾಜ್ಯಪಾಲ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಲೋಕಾಯುಕ್ತ ಕೇಳಿದ್ದ ಅನುಮತಿ ನೀಡಲು ಯಾಕೆ ಮುಂದಾಗಿಲ್ಲ’ ಎಂದು ಪ್ರಶ್ನಿಸಿದರು.
‘ಕಾನೂನು ಎಲ್ಲರಿಗೂ ಒಂದೇ ಅಲ್ಲವೇ? ಬಿಜೆಪಿ ನಾಯಕರಿಗೆ ಸಂಬಂಧಿಸಿದ ಎಷ್ಟೋ ಕಡತಗಳನ್ನು ರಾಜ್ಯಪಾಲರು ವಿಲೇವಾರಿ ಮಾಡಿಲ್ಲ. ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ಅವರೇ ವಾದ ಮಂಡಿಸುತ್ತಾರೆ. ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬುವುದನ್ನು ರಾಜ್ಯದ ಜನರಿಗೆ ಪಕ್ಷ ತಿಳಿಸಿಕೊಡಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.