ಹನೂರು/ಕೊಳ್ಳೇಗಾಲ: ತಾಲ್ಲೂಕಿನ ಸುಳ್ವಾಡಿ ಗ್ರಾಮದ ಕಿಚ್‍ಕುತ್ ಮಾರಮನ್ಮನ ದೇವಸ್ಥಾನಲ್ಲಿ ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥರಾದ ರೋಗಿಗಳು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯಿಲ್ಲದೇ ಪರದಾಡಬೇಕಾಯಿತು.
ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ರೋಗಿಗಳಿಗೆ ಸುಳ್ವಾಡಿ ಗ್ರಾಮದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ವೈದ್ಯರ ಕೊರೆತಯಿಂದಾಗಿ 25ಕ್ಕೂ ಹೆಚ್ಚು ಜನರು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಬೇಕಾಯಿತು.
ಘಟನೆ ಸಂಭವಿಸಿದ ಸಂದರ್ಭದಲ್ಲಿ ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ 5 ಜನ ವೈದ್ಯರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದರು.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ಅವರು ಬೆಳಕವಾಡಿ, ಬಂಡಳ್ಳಿ ಹಾಗೂ ಇನ್ನಿತರ ಕಡೆಗಳಿಂದ ವೈದ್ಯರನ್ನು ಕರೆಸಿ ಚಿಕಿತ್ಸೆ ಪ್ರಾರಂಭಿಸಿರಾದರೂ ದಾಖಲಾಗುತ್ತಿದ್ದ ಕ್ಷಣದಿಂದ ಕ್ಷಣಕ್ಕೂ ರೋಗಿಗಳ ಸಂಖ್ಯೆ ಏರಿಕೆಯಾಗುತ್ತಿದ್ದರಿಂದ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು ಚಿಕಿತ್ಸೆ ನೀಡಲು ಹೆಣಗಾಡುವಂತಾಯಿತು.
ಲಘು ಲಾಠಿ ಪ್ರಹಾರ
ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡು ಮೇಲಿಂದ ಮೇಲೆ ತುರ್ತು ವಾಹನದಲ್ಲಿ ಆಗಮಿಸುತ್ತಿದ್ದ ಘಟನೆಯನ್ನು ವೀಕ್ಷಿಸಲು ಸರ್ಕಾರಿ ಆಸ್ಪತ್ರೆಯ ಮುಂಭಾಗ ಜನಸಾಗರವೇ ಹರಿದುಬಂದಿತ್ತು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಜನರು ಹಾಗೂ ರೋಗಿಗಳನ್ನು ನೋಡಲು ಆಗಮಿಸಿದ್ದ ಸಂಬಂಧಿಕರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಖಾಸಗಿ ಆಸ್ಪತ್ರೆ ವೈದ್ಯರಿಗೆ ಬುಲಾವ್
ವೈದ್ಯರ ಕೊರತೆ ಉಂಟಾಗಿರುವುದರಿಂದ ಖಾಸಗಿ ವೈದ್ಯರ ನೆರವನ್ನೂ ಜಿಲ್ಲಾಡಳಿತ ಬಳಸಿಕೊಂಡಿದೆ.
ಆರ್ಥಿಕವಾಗಿ ಪ್ರಬಲವಾಗಿರುವವರು ಅಸ್ವಸ್ಥರಾಗಿರುವ ತಮ್ಮ ಕುಟುಂದ ಸದಸ್ಯರನ್ನು ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಬಡವರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.