ADVERTISEMENT

ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ; ಸಿಎಂಗೆ ವರದಿ ಸಲ್ಲಿಕೆ: ರಾಮಲಿಂಗಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 30 ಮೇ 2023, 19:31 IST
Last Updated 30 ಮೇ 2023, 19:31 IST
ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ   

ಬೆಂಗಳೂರು: ‘ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿಯನ್ನು ಈಡೇರಿಸುತ್ತೇವೆ. ರಾಜ್ಯದ ನಾಲ್ಕೂ ನಿಗಮಗಳ ವ್ಯಾಪ್ತಿಯಲ್ಲಿ ಉಚಿತ ಪ್ರಯಾಣಕ್ಕೆ ತಗಲುವ ವೆಚ್ಚ ಮತ್ತು ಇತರೆ ಮಾಹಿತಿಯ ವರದಿಯನ್ನು ಸಿದ್ಧಪಡಿಸಲಾಗಿದ್ದು, ಮುಖ್ಯಮಂತ್ರಿಗೆ ಬುಧವಾರ ಸಲ್ಲಿಸಲಾಗುವುದು’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕೆಎಸ್‌ಆರ್‌ಟಿಸಿ ಮುಖ್ಯ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಚುನಾವಣೆ ಸಂದರ್ಭದಲ್ಲಿ, ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ನೀಡಲಾಗಿತ್ತು. ಈ ಕುರಿತ ವರದಿ ಮುಖ್ಯಮಂತ್ರಿಗೆ ವರದಿ ಸಲ್ಲಿಕೆಯಾದ ನಂತರ, ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪವಾಗಲಿದೆ’ ಎಂದು ಹೇಳಿದರು.

ADVERTISEMENT

‘ಉಚಿತ ಪ್ರಯಾಣಕ್ಕೆ ನಿರ್ಬಂಧ ವಿಧಿಸಲಾಗುವುದೇ’ ಎಂಬ ಪ್ರಶ್ನೆಗೆ, ‘ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವುದು ನಮ್ಮ ಉದ್ದೇಶ. ಹೆಚ್ಚಿನ ತೀರ್ಮಾನವನ್ನು ಸಚಿವ ಸಂಪುಟ ತೆಗೆದುಕೊಳ್ಳಲಿದೆ’ ಎಂದರು.

₹ 12,750 ಕೋಟಿ ವಾರ್ಷಿಕ ವೆಚ್ಚ

ಸಾರಿಗೆ ನಿಗಮಗಳ ಅಂಕಿ–ಅಂಶ ಬಿಡುಗಡೆ ಮಾಡಿದ ರಾಮಲಿಂಗಾರೆಡ್ಡಿ, ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (ಕೆಕೆಆರ್‌ಟಿಸಿ) ನಿಗಮಗಳು 2022–23ನೇ ಸಾಲಿನಲ್ಲಿ ಬಸ್‌ಗಳ ಕಾರ್ಯಾಚರಣೆಗೆ ₹ 12,750.49 ಕೋಟಿ ವೆಚ್ಚವಾಗಿದೆ. ಜೊತೆಗೆ, ₹ 8,946.85 ಕೋಟಿ ಆದಾಯ ಗಳಿಸಿವೆ’ ಎಂದರು.

ಬೆಂಗಳೂರಿನಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್‌ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್‌.ವಿ. ಪ್ರಸಾದ್‌ ಇದ್ದರು. – ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.