ADVERTISEMENT

ಟ್ರಕ್‌ ಟರ್ಮಿನಲ್‌ ಹಗರಣ: ವೀರಯ್ಯಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 3 ಜೂನ್ 2024, 16:28 IST
Last Updated 3 ಜೂನ್ 2024, 16:28 IST
   

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲಿ (ಡಿಡಿಯುಟಿಟಿಎಲ್‌) ನಡೆದಿದೆ ಎನ್ನಲಾದ ₹47.10 ಕೋಟಿ ಅಕ್ರಮ ಆರೋಪದ ಪ್ರಕರಣದಲ್ಲಿ ನಿಗಮದ ಮಾಜಿ ಅಧ್ಯಕ್ಷರೂ ಆದ ಡಿ.ಎಸ್‌.ವೀರಯ್ಯ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಿಸಿಎಚ್‌–52ನೇ ಕೋರ್ಟ್‌ ಮಾನ್ಯ ಮಾಡಿದ್ದು, ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.

ಈ ಕುರಿತಂತೆ ಡಿ.ಎಸ್‌.ವೀರಯ್ಯ ಸಲ್ಲಿಸಿದ್ದ ಕ್ರಿಮಿನಲ್‌ ಮಿಸಲೇನಿಯಸ್‌ ಅರ್ಜಿಯನ್ನು ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ನ 52ನೇ ನ್ಯಾಯಾಲಯದ ನ್ಯಾಯಾಧೀಶ ಯಶವಂತ ಕುಮಾರ್ ಸೋಮವಾರ ವಿಚಾರಣೆ ನಡೆಸಿ ಮಧ್ಯಂತರ ಜಾಮೀನು ಮಂಜೂರು ಮಾಡಿದರು.

ಅರ್ಜಿದಾರರ ಪರ ಹೈಕೋರ್ಟ್‌ ವಕೀಲೆ ಡಾ.ವಂದನಾ ಪಿ.ಎಲ್‌ ಅವರ ವಾದ ಆಲಿಸಿದ ನ್ಯಾಯಾಧೀಶರು, ‘ಅರ್ಜಿದಾರರು ₹5 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಷ್ಟೇ ಮೊತ್ತಕ್ಕೆ ಒಬ್ಬರ ಶ್ಯೂರಿಟಿ ನೀಡಬೇಕು. ತನಿಖೆಗೆ ಸಹಕರಿಸಬೇಕು. ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ಬಿಟ್ಟು ತೆರಳುವಂತಿಲ್ಲ’ ಎಂಬ ಷರತ್ತುಗಳನ್ನು ವಿಧಿಸಿದರು. ಪ್ರತಿವಾದಿ ಪ್ರಾಸಿಕ್ಯೂಷನ್‌ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಇದೇ 10ಕ್ಕೆ ಮುಂದೂಡಿದರು.

ADVERTISEMENT

ಅರ್ಜಿದಾರರ ವಿರುದ್ಧ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 120 ಬಿ, 409, 420,465, 468 ಮತ್ತು 471ರ ಅಡಿಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.