ADVERTISEMENT

ನಿಗಮ, ಮಂಡಳಿಗಳಲ್ಲಿ ಎರಡೂವರೆ ವರ್ಷ ಅಧಿಕಾರ ಹಂಚಿಕೆ: ಡಿ.ಕೆ. ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2023, 9:55 IST
Last Updated 14 ಆಗಸ್ಟ್ 2023, 9:55 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ನಿಗಮ, ಮಂಡಳಿಗಳು ಸೇರಿದಂತೆ ವಿವಿಧ ನಾಮನಿರ್ದೇಶನಗಳಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, 'ಪಕ್ಷದ ಗೆಲುವಿಗಾಗಿ ದುಡಿದ ಹೆಚ್ಚು ಜನರಿದ್ದಾರೆ. ಅವರಿಗೆ ಅಧಿಕಾರ ನೀಡುವ ಉದ್ದೇಶದಿಂದ ತಲಾ‌ ಎರಡೂವರೆ ವರ್ಷಗಳ ಅವಧಿಗೆ ಅಧಿಕಾರ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ನೇಮಕಕ್ಕೆ ಅರ್ಹರಾಗಿರುವವರ ಪಟ್ಟಿ ಒದಗಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಪತ್ರ ಬರೆಯಲಾಗಿದೆ' ಎಂದರು.

ಪಕ್ಷಕ್ಕಾಗಿ ದುಡಿದವರಿಗೆ ಸ್ಥಾನಮಾನ ನೀಡಲಾಗುವುದು. ಅವರು ಪ್ರತಿನಿಧಿಸುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಮತಗಳು ಬಂದಿವೆ ಎಂಬುದನ್ನೂ ಪರಿಗಣಿಸಲಾಗುವುದು. ಮತಗಟ್ಟೆಯಲ್ಲಿ ಮುನ್ನಡೆ ಕೊಡಿಸಲಾಗದವರಿಗೆ ಹುದ್ದೆ ಕೊಡುವುದರಲ್ಲಿ ಅರ್ಥವಿಲ್ಲ ಎಂದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಜತೆ ಸಭೆ ನಡೆಸಿ ಅವರ ಅಹವಾಲು ಆಲಿಸಲಾಗುವುದು. ಸಚಿವರು ಪ್ರವಾಸದ ಅವಧಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗಳಿಗೆ ಭೇಟಿನೀಡುವುದು ಕಡ್ಡಾಯ ಎಂದು ಹೇಳಿದರು.

ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಬಾಕಿ ಇರುವ ಎಲ್ಲ ಚುನಾವಣೆಗಳನ್ನು ನಡೆಸಲು ಕಾಂಗ್ರೆಸ್ ಸರ್ಕಾರ ಸಿದ್ಧವಿದೆ. ನ್ಯಾಯಾಲಯದ ಅನುಮತಿ ಪಡೆದು ಚುನಾವಣಾ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.