ADVERTISEMENT

ಕೆ.ಆರ್‌.ಮಾರುಕಟ್ಟೆಯಲ್ಲಿ ಅನಧಿಕೃತ ಮಳಿಗೆ: ಬಿಬಿಎಂಪಿಗೆ ಹೈಕೋರ್ಟ್‌ ನೋಟಿಸ್

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 16:32 IST
Last Updated 21 ನವೆಂಬರ್ 2024, 16:32 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಕೆ.ಆರ್.ಮಾರುಕಟ್ಟೆಯಲ್ಲಿರುವ ಪಾದಚಾರಿ ಮಾರ್ಗ ಹಾಗೂ ಅಗ್ನಿ ಸುರಕ್ಷತಾ ನಿರ್ಗಮನ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಮಳಿಗೆಗಳನ್ನು ತೆರವುಗೊಳಿಸಲು ಆದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ, 'ಆಲ್‌ ಟ್ರೇಡರ್ಸ್‌ ಫಾರ್ಮರ್ಸ್‌ ಮರ್ಚಂಟ್‌ ವೆಲ್ಫೇರ್‌ ಅಸೋಸಿಯೇಷನ್‌’ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮ್‌ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ರಾಜ್ಯ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ, ಬಿಬಿಎಂಪಿ ಮುಖ್ಯ ಆಯುಕ್ತ ಸೇರಿದಂತೆ ಒಟ್ಟು 12 ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿತು. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಆರ್‌.ರಹಮತ್‌ ಉಲ್ಲಾ ಹಾಜರಿದ್ದರು.

ADVERTISEMENT

ಮನವಿ ಏನು?: ‘ಕೆ.ಆರ್‌.ಮಾರುಕಟ್ಟೆಯ ಪಾದಚಾರಿ ಮಾರ್ಗ, ಸಾರ್ವಜನಿಕ ಪ್ರದೇಶ ಮತ್ತು ಅಗ್ನಿ ಸುರಕ್ಷತಾ ನಿರ್ಗಮನ ಪ್ರದೇಶವನ್ನು ಕೆಲವರು ಒತ್ತುವರಿ ಮಾಡಿ ಮಳಿಗೆಗಳನ್ನು ನಿರ್ಮಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಮತ್ತು ಮಾರುಕಟ್ಟೆ ವ್ಯಾಪಾರಿಗಳಿಗೆ ತೊಂದರೆಯಾಗುತ್ತಿದೆ. ಒತ್ತುವರಿ ತೆರವುಗೊಳಿಸುವಂತೆ ಕೋರಿ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ, ಈವರೆಗೂ ಒತ್ತುವರಿ ತೆರವುಗೊಂಡಿಲ್ಲ. ಆದ್ದರಿಂದ, ನಮ್ಮ ಮನವಿ ಪರಿಗಣಿಸಲು ಬಿಬಿಎಂಪಿ ಮತ್ತು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.