ಬೆಂಗಳೂರು: ನದಿ ಜೋಡಣೆ ಯೋಜನೆ ವಿಚಾರದ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಕರೆಯುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ‘ಕರ್ನಾಟಕವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನದಿ ಜೋಡಣೆ ಯೋಜನೆ ಘೋಷಣೆ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಹಾಗಾಗಿ ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷ ಸಭೆ ಕರೆದು, ಚರ್ಚಿಸಿ, ಒಮ್ಮತದ ವಿರೋಧವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕು’ ಎಂದು ಹೇಳಿದ್ದಾರೆ.
‘ಬಜೆಟ್ ಮಂಡಿಸಿ ಮೂರು ದಿನಗಳಾದರೂ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿರುವ ನದಿ ಜೋಡಣೆ ಪ್ರಸ್ತಾಪಕ್ಕೆ ಯಾವೊಬ್ಬ ಬಿಜೆಪಿ ಸಂಸದ, ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಮಾತನಾಡಿಲ್ಲ. ಇವರು ರಾಜ್ಯದ ಹಿತರಕ್ಷಣೆ ಮಾಡುತ್ತಾರಾ’ ಎಂದು ಪ್ರಶ್ನಿಸಿದ್ದಾರೆ.
‘ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕದ ಬಗ್ಗೆ ಸ್ವಲ್ಪವಾದರೂ ಕಾಳಜಿ ಇದ್ದರೆ ಮೇಕೆದಾಟು ಯೋಜನೆಗೆ ಮೊದಲು ಪರಿಸರ ಅನುಮತಿ ಪತ್ರ ಕೊಡಿಸಲಿ. ದಕ್ಷಿಣದ ನದಿಗಳ ಜೋಡಣೆ ಆಮೇಲೆ ನೋಡೋಣ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.