ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹94 ಕೋಟಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ನಗರದಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮನೆಗಳು ಮತ್ತು ನಿಗಮದ ಪ್ರಧಾನ ಕಚೇರಿ ಮೇಲೆ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಯ ಮಾಜಿ ಸಚಿವರೂ ಆಗಿರುವ ನಾಗೇಂದ್ರ ಅವರ ಸದಾಶಿವನಗರದ ಫ್ಲ್ಯಾಟ್, ಯಲಹಂಕದಲ್ಲಿರುವ ಬಸನಗೌಡ ದದ್ದಲ್ ಮನೆ ಹಾಗೂ ವಸಂತನಗರದಲ್ಲಿರುವ ವಾಲ್ಮೀಕಿ ನಿಗಮದ ಕಚೇರಿಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಭದ್ರತೆಯೊಂದಿಗೆ ಕಾರ್ಯಾಚರಣೆ ನಡೆಸುತ್ತಿದ್ದು, ಬೆಂಗಳೂರಿನಲ್ಲಿ ಇನ್ನೂ ಕೆಲವೆಡೆ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣ ಕುರಿತು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ) ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ ತನಿಖೆಯನ್ನು ಚುರುಕುಗೊಳಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಬಿ. ಪದ್ಮನಾಭ ಮತ್ತು ಹಿಂದಿನ ಲೆಕ್ಕಾಧಿಕಾರಿ ಪರಶುರಾಮ ದುರ್ಗಣ್ಣನವರ ಅವರ ಬೆಂಗಳೂರಿನ ಮನೆಗಳ ಮೇಲೂ ಇ.ಡಿ ದಾಳಿ ನಡೆಸಿದ್ದು, ಶೋಧ ಮುಂದುವರಿದಿದೆ. ಈ ಇಬ್ಬರೂ ಎಸ್ಐಟಿ ಕಸ್ಟಡಿಯಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.