ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರು ನಿರ್ದೋಷಿಯಾದರೆ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬಹುದು ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ಹಿಂದೆಯೂ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಕೆ.ಜೆ. ಜಾರ್ಜ್ ಅವರ ಮೇಲೆ ಆರೋಪ ಬಂದಿತ್ತು. ಅವರು ನಿರಪರಾಧಿ ಎನ್ನುವುದು ದೃಢಪಟ್ಟ ನಂತರ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳಲಾಗಿತ್ತು. ವಾಲ್ಮೀಕಿ ನಿಗಮ ಹಗರಣದ ತನಿಖೆ ಮುಗಿದು, ಕೋರ್ಟ್ ತೀರ್ಪು ಬಂದ ನಂತರ ನಾಗೇಂದ್ರ ಅವರನ್ನೂ ಮರಳಿ ಸಂಪುಟಕ್ಕೆ ತೆಗೆದುಕೊಳ್ಳಲು ಅಭ್ಯಂತರವಿಲ್ಲ ಎಂದರು.
ಸಂಪುಟ ಪುನರ್‌ರಚನೆಯ ಬಗ್ಗೆ ಖಚಿತ ಮಾಹಿತಿ ಇಲ್ಲ. ಡಿಸೆಂಬರ್ ನಂತರ ಎನ್ನುವ ವದಂತಿ ಇದೆ. ಇಂತಹ ವಿಚಾರಗಳಲ್ಲಿ ಮುಖ್ಯಮಂತ್ರಿಯವರು ಹೈಕಮಾಂಡ್ ಜತೆ ಚರ್ಚಿಸಿ, ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
ವಿಧಾನಸಭೆ ಉಪ ಚುನಾವಣೆ ಮುಗಿದ ಬಳಿಕ ಒಳಮೀಸಲಾತಿಗೆ ಆಯೋಗ ರಚಿಸಲಾಗುತ್ತದೆ ಎಂದು ಈಗಾಗಲೇ ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆ. ಒಳ ಮೀಸಲಾತಿಗಾಗಿ ಇಷ್ಟು ವರ್ಷಗಳಿಂದ ಹೋರಾಟ ಮಾಡಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಸರಿಯಾಗಿ ಸಾಗಲು ಇನ್ನು ಮೂರು ತಿಂಗಳು ಕಾಯುವುದರಲ್ಲಿ ತಪ್ಪಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.