ADVERTISEMENT

ವಾಲ್ಮೀಕಿ ನಿಗಮ ಹಗರಣ: ಸಾಕ್ಷ್ಯ ನಾಶ ಆರೋಪ ನಿರಾಧಾರ- ಸಚಿವ ಶರಣಪ್ರಕಾಶ್ ಪಾಟೀಲ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 11:04 IST
Last Updated 8 ಜೂನ್ 2024, 11:04 IST
ಡಾ. ಶರಣಪ್ರಕಾಶ್ ಪಾಟೀಲ
ಡಾ. ಶರಣಪ್ರಕಾಶ್ ಪಾಟೀಲ   

ಬೆಂಗಳೂರು: ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಸಾಕ್ಷ್ಯ ನಾಶಗಳ ಕುರಿತಾಗಿ ನನ್ನ ಕಚೇರಿಯಲ್ಲಿ ಯಾವುದಾದರೂ ವ್ಯಕ್ತಿಗಳ ಜೊತೆ ನಾನು ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಸವಾಲು ಹಾಕಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಮೇ 24ರಂದು ವಿಕಾಸಸೌಧದ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ಸೇರಿದಂತೆ ಕೆಲವರ ಜೊತೆ ನಾನು ಸಭೆ ನಡೆಸಿ ಸಾಕ್ಷ್ಯ ನಾಶ ಮಾಡಿದ್ದೇನೆಂಬ ಆರೋಪ ಕೇಳಿಬಂದಿದೆ. ಆದರೆ, ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ನಾನು ಆ ದಿನ ಕಚೇರಿಗೆ ಭೇಟಿ ನೀಡಿರಲಿಲ್ಲ’ ಎಂದರು.

‘ಆದರೂ ನಾನು ಕಚೇರಿಯಲ್ಲಿ ಇದ್ದೆ ಎಂದರೆ, ಅದಕ್ಕಿಂತ ಅಪಹಾಸ್ಯ ಇನ್ನೇನಿದೆ’ ಎಂದುಆರೋಪಗಳನ್ನು ತಳ್ಳಿ ಹಾಕಿದ ಅವರು, ‘ಯಾವುದೇ ರೀತಿಯ ತನಿಖೆ ಮಾಡಿದರೂ ಕಾನೂನುಬದ್ಧವಾಗಿ ಎದುರಿಸಲು ಸಿದ್ಧನಿದ್ದೇನೆ’ ಎಂದರು.

ADVERTISEMENT

‘ಸುಳ್ಳು ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅಷ್ಟಕ್ಕೂ ವಿಕಾಸಸೌಧದ ಕೊಠಡಿ ಸರ್ಕಾರ ನೀಡಿರುವ ಕಚೇರಿ. ಅದು ನನ್ನ ಸ್ವಂತ ಮನೆಯೇನೂ ಅಲ್ಲ. ನಾನು ಸಚಿವನಾಗಿರುವುದರಿಂದ ನನ್ನನ್ನು ನೋಡಲು ರಾಜ್ಯದ ವಿವಿಧ ಭಾಗಗಳಿಂದ ನೂರಾರು ಜನ ಬಂದು ಹೋಗುತ್ತಾರೆ. ಬಂದು ಹೋಗುವವರ ಪೂರ್ಣ ವಿವರಗಳನ್ನು ಕಲೆ ಹಾಕಲು ಸಾಧ್ಯವೇ’ ಎಂದು ಪ್ರಶ್ನಿಸಿದರು.

‘ಎಸ್‍ಐಟಿ ವಶದಲ್ಲಿರುವ ವ್ಯಕ್ತಿಗಳ ಮುಖವನ್ನು ನಾನು ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧವೂ ಇಲ್ಲ. ಎಸ್‍ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದು ನನಗೂ ಗೊತ್ತಿಲ್ಲ. ವೈದ್ಯಕೀಯ ಶಿಕ್ಷಣ ಸಚಿವರು ಎಂದು ಎಲ್ಲಾದರೂ ಹೇಳಿರುವ ಬಗ್ಗೆ ವರದಿಯಾಗಿದೆಯೇ? ಊಹಾಪೋಹಗಳಿಗೆ ನಾನೇಕೆ ಉತ್ತರ ಕೊಡಲಿ’ ಎಂದೂ ಹೇಳಿದರು.

‘ಬಂಧಿತ ಆರೋಪಿಗಳು ಏನು ಹೇಳಿಕೆ ಕೊಟ್ಟಿದ್ದಾರೆ ಎಂಬುದು ನನಗೂ ಗೊತ್ತಿಲ್ಲ. ಸರ್ಕಾರಕ್ಕೂ ತಿಳಿದಿಲ್ಲ. ಅಂತೆಕಂತೆಗಳಿಗೆ ಉತ್ತರ ಕೊಡುವ ಅಗತ್ಯವೂ ನನಗೆ ಬಂದಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಮೇಲೆ ಆರೋಪಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ಹೇಳಿದರು.

‘ನಾನು ನನ್ನ ಕಚೇರಿಯಲ್ಲಿ ಸಭೆ ನಡೆಸಿದ್ದರೆ ಸಿಸಿಟಿವಿ ಕ್ಯಾಮೆರಾದ ತುಣುಕುಗಳನ್ನು ತೆಗೆದು ಪರಿಶೀಲಿಸಲಿ. ಈ ಕುರಿತು ಸರ್ಕಾರ ತನಿಖೆ ನಡೆಸಿದರೂ ನನ್ನ ಅಭ್ಯಂತರವಿಲ್ಲ. ತನಿಖೆಯಲ್ಲಿ ಸತ್ಯಸತ್ಯತೆ ಹೊರಬರಲಿದೆ. ಯಾರೇ ತಪ್ಪೇ ಮಾಡಿದರೂ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ’ ಎಂದರು.

ಬಿಜೆಪಿಯವರು ರಾಜೀನಾಮೆ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಯಾವ ಆಧಾರದ ಮೇಲೆ ಅವರು ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ ಎಂಬುದೇ ಗೊತ್ತಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಮೇಲೆ ರಾಜೀನಾಮೆ ನೀಡುವ ಔಚಿತ್ಯವಾದರೂ ಏನು’ ಎಂದೂ ಅವರು ಮರು ಪ್ರಶ್ನೆ ಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.