ನವದೆಹಲಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಶುಕ್ರವಾರ ಭೇಟಿ ಮಾಡಿ ರಾಜ್ಯಸಭಾ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆ ಹಾಗೂ ಲೋಕಸಭಾ ಚುನಾವಣೆಯ ಸಿದ್ಧತೆ ಕುರಿತು ಚರ್ಚಿಸಿದರು.
ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡುವ ಸಂಬಂಧ ಬಿಜೆಪಿಯ ರಾಜ್ಯ ಘಟಕದ ಪ್ರಮುಖರ ಸಭೆಯು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ವರಿಷ್ಠರಿಗೆ ನಾಲ್ಕು ಹೆಸರುಗಳನ್ನು ಶಿಫಾರಸು ಮಾಡಲು ತೀರ್ಮಾನಿಸಲಾಗಿತ್ತು. ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್, ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ನಾಲ್ವರ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಈ ಬಗ್ಗೆ ವರಿಷ್ಠರು ವಿಜಯೇಂದ್ರ ಅವರಿಂದ ಮಾಹಿತಿ ಪಡೆದರು ಎಂದು ಮೂಲಗಳು ಹೇಳಿವೆ. ಅಭ್ಯರ್ಥಿಯ ಹೆಸರು ಒಂದೆರಡು ದಿನಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಒಂದು ವಾರದಲ್ಲಿ ವರಿಷ್ಠರು ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
2006ರಿಂದ ರಾಜ್ಯಸಭೆಗೆ ಆಯ್ಕೆಯಾಗುತ್ತಿರುವ ರಾಜೀವ್ ಚಂದ್ರಶೇಖರ್ ಅವರ ಅವಧಿ ಏಪ್ರಿಲ್ 2ಕ್ಕೆ ಮುಗಿಯಲಿದೆ. ಲೋಕಸಭಾ ಚುನಾವಣೆಗೆ ರಾಜೀವ್ ಅವರನ್ನು ಕಣಕ್ಕೆ ಇಳಿಸಲು ಪಕ್ಷದ ವರಿಷ್ಠರು ತೀರ್ಮಾನಿಸಿದರೆ ರಾಜ್ಯಸಭಾ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ಸಿಗಲಿದೆ.
ರಾಜ್ಯಸಭಾ ಚುನಾವಣೆ ಇದೇ 27ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇದೇ 15ರಂದು ಕೊನೆಯ ದಿನ.
ನಡ್ಡಾ ಭೇಟಿಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ವಿಜಯೇಂದ್ರ, ‘ಪಕ್ಷದ ಹಿರಿಯ ಮುಖಂಡ ವಿ.ಸೋಮಣ್ಣ ಅವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಎಲ್ಲ ವಿಚಾರಗಳು ಚರ್ಚೆ ಆಗಿವೆ. ಅಭ್ಯರ್ಥಿಗಳ ಆಯ್ಕೆ ಕುರಿತು ವರಿಷ್ಠರು ಅಂತಿಮ ತೀರ್ಮಾನ ಮಾಡಲಿದ್ದಾರೆ’ ಎಂದರು.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹೊಸ ದಾಖಲೆ ಬರೆಯಲಿದ್ದು, 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ನಡ್ಡಾ ಅವರಿಗೆ ಭರವಸೆ ನೀಡಿದ್ದೇನೆ ಎಂದೂ ಅವರು ಹೇಳಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಾ.ಕೆ. ಸುಧಾಕರ್ ರಿಸ್ಕ್ ತೆಗೆದುಕೊಂಡು ಬಿಜೆಪಿಗೆ ಬಂದರು. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಹೆಚ್ಚಿನ ಅಸ್ತಿತ್ವವೇ ಇರಲಿಲ್ಲ. ಅವರು ಬಿಜೆಪಿಗೆ ಬಂದಿದ್ದು ಹುಡುಗಾಟಿಕೆಯ ಮಾತಲ್ಲ. ಈ ಹಿಂದೆ ಚುನಾವಣೆಯಲ್ಲಿ ಗೆದ್ದಿದ್ದರು. 2023ರ ಚುನಾವಣೆಯಲ್ಲಿ ಅವರಿಗೆ ಸೋಲಾಗಿದೆ. ಅವರು ಲೋಕಸಭಾ ಟಿಕೆಟ್‌ಗೆ ಅಪೇಕ್ಷೆ ಪಡುವುದು ತಪ್ಪಲ್ಲ. ಅವರಿಗೆ ಟಿಕೆಟ್ ಕೊಡಬೇಕು ಅಥವಾ ಕೊಡಬಾರದು ಎಂದು ನಾನು ಹೇಳಿಲ್ಲ. ಕಾರ್ಯಕರ್ತರ ಅಭಿಪ್ರಾಯ ಪಡೆದು ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಪ್ರಧಾನಿ ಅವರನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಭೇಟಿಯಾದ ಕುರಿತು ಪ್ರತಿಕ್ರಿಯಿಸಿದ ಅವರು, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಡಿದ್ದು ಮೈಸೂರಿಗೆ ಬರಲಿದ್ದು, ಆ ಸಂದರ್ಭದಲ್ಲಿ ಈ ವಿಷಯದ ಕುರಿತು ಚರ್ಚೆಯಾಗಲಿದೆ’ ಎಂದರು.
ಮುನಿಸು ಮರೆತ ಯತ್ನಾಳ–ವಿಜಯೇಂದ್ರ
ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಗೃಹ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ಬಿಜೆಪಿ ನಾಯಕರು ಶುಕ್ರವಾರ ಸಮಾಲೋಚನೆ ನಡೆಸಿದರು. ಈ ಸಭೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ರಮೇಶ ಜಾರಕಿಹೊಳಿ ಸಹ ಭಾಗಿಯಾದರು. ಕೆಲವು ಸಮಯದಿಂದ ವಿಜಯೇಂದ್ರ ವಿರುದ್ಧ ಯತ್ನಾಳ ಅವರು ನಿರಂತರ ವಾಗ್ದಾಳಿ ನಡೆಸಿದ್ದರು. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ರಮೇಶ ಜಾರಕಿಹೊಳಿ ಅಂತರ ಕಾಯ್ದುಕೊಂಡಿದ್ದರು. ‘ಜೋಶಿ ಅವರನ್ನು ಭೇಟಿ ಮಾಡುವ ವೇಳೆ ಅನಿರೀಕ್ಷಿತವಾಗಿ ಯತ್ನಾಳ ಮತ್ತು ಜಾರಕಿಹೊಳಿ ಸಿಕ್ಕಿದ್ದರು. ಯತ್ನಾಳ ಅವರೊಂದಿಗೆ ನಾನೇ ಮಾತನಾಡಿದೆ. ಅವರ ಜೊತೆ ಕುಳಿತು ಚರ್ಚಿಸಿದ್ದೇನೆ. ಅದಕ್ಕೆ ಬಹಳ ವಿಶೇಷತೆ ನೀಡುವ ಅಥವಾ ಬೇರೆ ಅರ್ಥ ಕೊಡುವ ಅಗತ್ಯವಿಲ್ಲ’ ಎಂದು ವಿಜಯೇಂದ್ರ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.