ADVERTISEMENT

ಬರ್ನ್‌ಪುರ ಕಂಪನಿ ಮಾದರಿಯಲ್ಲಿ ವಿಐಎಸ್‌ಎಲ್‌ ಪುನರುಜ್ಜೀವನ?

ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳೊಂದಿಗೆ ಎಚ್‌ಡಿಕೆ ಸಮಾಲೋಚನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 15:32 IST
Last Updated 19 ಜೂನ್ 2024, 15:32 IST
ಅಮಿತ್ ಶಾ ಅವರೊಂದಿಗೆ ಎಚ್‌.ಡಿ.ಕುಮಾರಸ್ವಾಮಿ ಸಮಾಲೋಚನೆ ನಡೆಸಿದರು. 
ಅಮಿತ್ ಶಾ ಅವರೊಂದಿಗೆ ಎಚ್‌.ಡಿ.ಕುಮಾರಸ್ವಾಮಿ ಸಮಾಲೋಚನೆ ನಡೆಸಿದರು.    

ನವದೆಹಲಿ: ಪಶ್ಚಿಮ ಬಂಗಾಳದ ಬರ್ನ್‌ಪುರದಲ್ಲಿರುವ ಭಾರತೀಯ ಕಬ್ಬಿಣ ಮತ್ತು ಉಕ್ಕು ಕಂಪನಿಯ ಅಭಿವೃದ್ಧಿಯ ಮಾದರಿಯಲ್ಲೇ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್‌ಎಲ್‌) ಪುನರುಜ್ಜೀವನಗೊಳಿಸಲು ಕೇಂದ್ರ ಉಕ್ಕು ಸಚಿವಾಲಯ ಚಿಂತನೆ ನಡೆಸಿದೆ. 

ಭಾರತೀಯ ಕಬ್ಬಿಣ ಮತ್ತು ಉಕ್ಕು ಕಂಪನಿ, ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳೊಂದಿಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ಸಭೆ ನಡೆಸಿದರು. ಭದ್ರಾವತಿ ಕಾರ್ಖಾನೆ ಪುನರುಜ್ಜೀವನಗೊಳಿಸಲು ಇರುವ ಅವಕಾಶಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಬರ್ನ್‌ಪುರದಲ್ಲಿರುವ ಕಾರ್ಖಾನೆ ಈ ಹಿಂದೆ ಭಾರಿ ನಷ್ಟದಲ್ಲಿತ್ತು. ಕೇಂದ್ರ ಸರ್ಕಾರವು ಈ ಕಾರ್ಖಾನೆಯ ಪುನರುಜ್ಜೀವನಕ್ಕೆ ₹16 ಸಾವಿರ ಕೋಟಿ ನೆರವು ನೀಡಿತ್ತು. ಈ ಕಾರ್ಖಾನೆಯನ್ನು ಪ್ರಧಾನಿ ನರೇಂದ್ರ ಮೋದಿ 2015ರಲ್ಲಿ ಉದ್ಘಾಟಿಸಿದ್ದರು. ನಷ್ಟದಲ್ಲಿದ್ದ ಈ ಕಂಪನಿಯು ಮೋದಿ ಅವರ ಒತ್ತಾಸೆಯಿಂದ ಲಾಭದತ್ತ ಸಾಗಿದೆ. ಲಾಭದಲ್ಲಿರುವ ಕಂಪನಿಯನ್ನು ಮತ್ತಷ್ಟು ಲಾಭದತ್ತ ಮುನ್ನಡೆಸಬೇಕು ಎಂದು ಕುಮಾರಸ್ವಾಮಿ ಸೂಚಿಸಿದರು. ಅದೇ ರೀತಿಯಲ್ಲಿ ಭದ್ರಾವತಿ ಕಂಪನಿಯ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಬೇಕು. ಪ್ರಧಾನಿ ಅವರೊಂದಿಗೆ ಸಮಾಲೋಚಿಸಿ ಅಗತ್ಯ ಅನುದಾನ ಕೊಡಿಸಲು ಪ್ರಯತ್ನ ಪಡುತ್ತೇನೆ ಎಂದು ಸಚಿವರು ಭರವಸೆ ನೀಡಿದರು. 

ADVERTISEMENT

ವಿಐಎಸ್‌ಎಲ್‌ ಖಾಸಗೀಕರಣ ಮಾಡಲು ಕೇಂದ್ರ ಸಚಿವ ಸಂಪುಟವು 2016ರಲ್ಲಿ ಒಪ್ಪಿಗೆ ನೀಡಿತ್ತು. ಸಂಸ್ಥೆಯನ್ನು ಸಂಪೂರ್ಣವಾಗಿ ಮಾರಾಟ ಮಾಡಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯು (ಡಿಐಪಿಎಎಂ) ಈ ಹಿಂದೆ ಬಿಡ್‌ ಕರೆದಿತ್ತು. ಬಿಡ್‌ದಾರರು ಆಸಕ್ತಿ ವಹಿಸದ ಕಾರಣಕ್ಕೆ ಕಾರ್ಖಾನೆಯನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ 2022ರ ನವೆಂಬರ್‌ನಲ್ಲಿ ಕೈ ಬಿಟ್ಟಿತ್ತು. ನಂತರ ಸರ್ಕಾರವು ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆ ಆರಂಭಿಸಿತ್ತು. ಸಂಸ್ಥೆಯ ಪುನರುಜ್ಜೀವನದ ಸಾಧ್ಯಾಸಾಧ್ಯತೆಗಳ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಕುಮಾರಸ್ವಾಮಿ ಈಗಾಗಲೇ ನಿರ್ದೇಶನ ನೀಡಿದ್ದಾರೆ. 

ಬಿಎಚ್‌ಇಎಲ್‌ ನಿಯೋಗ ಭೇಟಿ: ಕುಮಾರಸ್ವಾಮಿ ಅವರನ್ನು ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿ (ಬಿಎಚ್ಇಎಲ್‌) ನಿಯೋಗ ಭೇಟಿ ಮಾಡಿ ಚರ್ಚಿಸಿತು. ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ ವ್ಯವಸ್ಥಾಪಕ ನಿರ್ದೇಶಕ ಕೆ.ಸದಾಶಿವ ಮೂರ್ತಿ ಪ್ರಾತ್ಯಕ್ಷಿಕೆ ನೀಡಿದರು. ಸಂಶೋಧನೆ ಮತ್ತು ಅಭಿವೃದ್ಧಿ, ರಕ್ಷಣೆ ವಲಯದಲ್ಲಿ ಉತ್ಪಾದನೆ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. 

ಸತ್ಯಮಂಗಲ ರೈಲಿಗೆ ಎಚ್‌ಡಿಕೆ ಒತ್ತಡ 

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.  ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.  ಎಚ್.ಡಿ.ದೇವೆಗೌಡ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು - ಸತ್ಯಮಂಗಲ- ಚಾಮರಾಜನಗರ (ಕನಕಪುರ - ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಅವರು ಕೋರಿದರು. 

ಉಪಚುನಾವಣೆ: ಶಾ–ಎಚ್‌ಡಿಕೆ ಚರ್ಚೆ 

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಎಚ್‌.ಡಿ.ಕುಮಾರಸ್ವಾಮಿ ಭೇಟಿ ಮಾಡಿ ಕರ್ನಾಟಕ ರಾಜಕೀಯ ಬೆಳವಣಿಗೆಗಳು ಸೇರಿ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.  ಚನ್ನಪಟ್ಟಣ ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಶೀಘ್ರ ಉಪಚುನಾವಣೆ ಘೋಷಣೆಯಾಗಲಿದೆ. ಈ ಚುನಾವಣೆಯಲ್ಲಿ ಜೆಡಿಎಸ್‌–ಬಿಜೆಪಿ ಮೈತ್ರಿಯನ್ನು ಮುಂದುವರಿಸುವ ಬಗ್ಗೆ ಉಭಯ ನಾಯಕರು ಚರ್ಚಿಸಿದರು. ಚನ್ನಪಟ್ಟಣದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಶಾಸಕರಾಗಿದ್ದರು. ಈ ಕ್ಷೇತ್ರದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್‌ ರಾಜ್ಯ ನಾಯಕರು ನಿರ್ಣಯ ತೆಗೆದುಕೊಂಡಿದ್ದಾರೆ. ಇನ್ನೊಂದೆಡೆ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಈ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕು ಎಂದು ಕುಮಾರಸ್ವಾಮಿ ಅವರು ಶಾ ಅವರಿಗೆ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.  ಗುಜರಾತ್‌ನಲ್ಲಿ ಸೆಮಿಕಂಡಕ್ಟರ್‌ ಉದ್ಯಮದಲ್ಲಿ ಹೂಡಿಕೆ ಮಾಡುತ್ತಿರುವ ಕಂಪನಿಗೆ ₹16710 ಕೋಟಿ (ಎರಡು ಬಿಲಿಯನ್‌ ಡಾಲರ್‌) ಸಹಾಯಧನ ನೀಡಿರುವುದಕ್ಕೆ ಕುಮಾರಸ್ವಾಮಿ ಕಳೆದ ಶುಕ್ರವಾರ ಆಕ್ಷೇಪ ವ್ಯಕ್ತಪಡಿಸಿದ್ದರು. ಮರುದಿನ ನಿಲುವು ಬದಲಿಸಿದ್ದರು. ಈ ವಿಷಯವನ್ನು ಶಾ ಅವರು ಪ್ರಸ್ತಾಪಿಸಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆ ನೀಡದಂತೆ ಕಿವಿಮಾತು ಹೇಳಿದರು ಎಂದು ಗೊತ್ತಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.