ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ಎಸ್ಟಿ-ಎಸ್ಟಿ) ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಹಿರಿಯ ಮತ್ತು ಕಿರಿಯ ವಾರ್ಡನ್ ಹುದ್ದೆಗಳನ್ನು ಭರ್ತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಹಣಕಾಸು ಇಲಾಖೆ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
‘ರಾಜ್ಯದಲ್ಲಿರುವ ಎಸ್ಸಿ-ಎಸ್ಟಿ ಹಾಸ್ಟೆಲ್‌ಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ ಮತ್ತು ಈ ಹಾಸ್ಟೆಲ್‌ಗಳಲ್ಲಿ ವಾರ್ಡನ್ ಹುದ್ದೆಗಳು ಖಾಲಿ ಇವೆ’ ಎಂಬ ಅಂಶದ ಬಗ್ಗೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ರಾಜ್ಯದ ಎಸ್ಟಿ-ಎಸ್ಟಿ ಹಾಸ್ಟೆಲ್‌ಗಳಲ್ಲಿನ ವಾರ್ಡನ್ ಹುದ್ದೆಗಳ ಕೊರತೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಈ ಹಿಂದಿನ ವಿಚಾರಣೆಯಲ್ಲಿ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿತ್ತು. ಸದ್ಯ ವರದಿ ಸಿದ್ಧವಾಗಿದ್ದು, ಇದನ್ನು ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.
ಇದೇ ವೇಳೆ ಪ್ರಕರಣದ ಅಮಿಕಸ್ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲ), ‘ವಾರ್ಡನ್‌ಗಳ ಭರ್ತಿ ಪ್ರಸ್ತಾವ ರಾಜ್ಯ ಹಣಕಾಸು ಇಲಾಖೆ ಮುಂದೆ ಬಾಕಿಯಿದೆ. ನೇಮಕಾತಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಅಗತ್ಯ ಸಹಕಾರ ಹಾಗೂ ಸಮನ್ವಯ ಸಾಧಿಸುವ ಸಲುವಾಗಿ ಈ ಅರ್ಜಿಯಲ್ಲಿ ಹಣಕಾಸು ಇಲಾಖೆಯ ಕಾರ್ಯದರ್ಶಿಯನ್ನು ಹೆಚ್ಚುವರಿ ಪ್ರತಿವಾದಿಯಾಗಿ ಸೇರ್ಪಡೆ ಮಾಡುವುದು ಸೂಕ್ತ’ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.
ಈ ಸಲಹೆಯನ್ನು ಒಪ್ಪಿದ ನ್ಯಾಯಪೀಠ, ಅರ್ಜಿಯಲ್ಲಿ ರಾಜ್ಯ ಹಣಕಾಸು ಇಲಾಖೆ ಕಾರ್ಯದರ್ಶಿಯನ್ನು ಪ್ರತಿವಾದಿಯಾಗಿ ಸೇರ್ಪಡೆಗೊಳಿಸಲು ನಿರ್ದೇಶಿಸಿತು. ಅಂತೆಯೇ, ಹಣಕಾಸು ಇಲಾಖೆ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಅಂತೆಯೇ, ‘ವಾರ್ಡನ್ ಹುದ್ದೆಗಳ ಕೊರತೆ ಬಗ್ಗೆ ಸರ್ಕಾರಿ ವಕೀಲರು ವರದಿ ಸಲ್ಲಿಸಬೇಕು’ ಎಂದು ಸೂಚಿಸಿ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.