ADVERTISEMENT

ನೀರಿನ ಅಭಾವ: ಪಿಡಿಒ ಜೊತೆ ಸಭೆ ನಡೆಸಿ– ಪ್ರಿಯಾಂಕ್‌

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2024, 19:28 IST
Last Updated 3 ಮಾರ್ಚ್ 2024, 19:28 IST
ಪ್ರಿಯಾಂಕ್‌ ಖರ್ಗೆ
ಪ್ರಿಯಾಂಕ್‌ ಖರ್ಗೆ   

(ಸಂಗ್ರಹ ಚಿತ್ರ)

ಬೆಂಗಳೂರು: ‘ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚುತ್ತಿದೆ. ಮುಂದಿನ ಮೂರು ತಿಂಗಳ ಕಾಲ ಪ್ರತಿ ಎರಡನೆ ಹಾಗೂ ನಾಲ್ಕನೆ ಸೋಮವಾರ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಜೊತೆ ಸಭೆ ನಡೆಸಿ ಕುಡಿಯುವ ನೀರಿನ ಪರಿಸ್ಥಿತಿ ಅವಲೋಕಿಸಬೇಕು. ನೀರಿನ ಅಭಾವ ಎದುರಿಸುವ ಗ್ರಾಮಗಳಿಗೆ ಪರ್ಯಾಯ ನೀರಿನ ವ್ಯವಸ್ಥೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಅವರು, ‘ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ 24X7 ನಿಯಂತ್ರಣ ಕೊಠಡಿ ಆರಂಭಿಸಬೇಕು. ತಾಲ್ಲೂಕು ಮಟ್ಟದಲ್ಲಿ ಕಾರ್ಯಾನಿರ್ವಾಹಕ ಅಧಿಕಾರಿಗಳ ಮುಖಾಂತರ ಕ್ಷಿಪ್ರ ಕಾರ್ಯಪಡೆ ರಚಿಸಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದೂ ನಿರ್ದೇಶನ ನೀಡಿದರು.

ADVERTISEMENT

ಗ್ರಾಮಗಳಲ್ಲಿನ ನೀರಿನ ಲಭ್ಯತೆ ಹಾಗೂ ಕೊರತೆಯ ಬಗ್ಗೆ ಮಾಹಿತಿ ಸಂಗ್ರಹಿಸಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ ಸಚಿವರು, ‘ಮುಂದಿನ ಮೂರು ತಿಂಗಳ ಕಾಲ ಪ್ರತಿ 15 ದಿನಗಳಿಗೊಮ್ಮೆ ಪತ್ರಿಕಾಗೋಷ್ಠಿ ಕರೆದು ನೀರಿನ ಅಭಾವ ಎದುರಿಸಲು  ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು’ ಎಂದರು.

‌‘ಕಳೆದ ವರ್ಷ ಏಪ್ರಿಲ್‌ 1ರಿಂದ 2024ರ ಫೆ. 27ರವರೆಗೆ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 2.12 ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ, ಗ್ರಾಮೀಣ ನೀರು ಕಲುಷಿತವಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಕಲುಷಿತ ಆಗದಂತೆ ನಿಗಾ ವಹಿಸಬೇಕು’ ಎಂದೂ ಸಲಹೆ ನೀಡಿದರು.

‘ಪ್ರತಿ ಸೋಮವಾರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ತೆಗೆದುಕೊಳ್ಳಬೇಕು. ಪ್ರವಾಸ ಸಮಯದಲ್ಲಿ ನರೇಗಾ ಕಾಮಗಾರಿಗಳ ವೀಕ್ಷಣೆ, ಕೂಸಿನ ಮನೆ ಹಾಗೂ ಅರಿವು ಕೇಂದ್ರಗಳ ತಪಾಸಣೆ ನಡೆಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.